ಕರ್ನಾಟಕ

karnataka

ETV Bharat / state

CAA ಪ್ರತಿಭಟನೆ ವೇಳೆ ಗೋಲಿಬಾರ್ : ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮದ ವಿವರ ಕೇಳಿದ ಹೈಕೋರ್ಟ್

ಸರ್ಕಾರದ ಪರ ವಕೀಲ ಪಿ. ತೇಜೇಶ್ ಹಾಜರಾಗಿ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡಿದೆ. ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಮ್ಯಾಜಿಸ್ಟ್ರೇಟ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು.

Golibar during CAA protest
ಗೋಲಿಬಾರ್​ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮದ ಬಗ್ಗೆ ವರದಿ ಕೇಳಿದ ಹೈಕೋರ್ಟ್​

By

Published : Jul 27, 2021, 5:29 AM IST

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್‌ ಸಂಬಂಧ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ ಎಂಬ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು ಪ್ರತಿಭಟನಾಕಾರರ ಮೇಲೆ ನಡೆದಿದ್ದ ಗೋಲಿಬಾರ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲ ಪಿ. ತೇಜೇಶ್ ಹಾಜರಾಗಿ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡಿದೆ. ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಮ್ಯಾಜಿಸ್ಟ್ರೇಟ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು.

ಹಾಗೆಯೇ, ವರದಿ ಪರಿಶೀಲನೆ ಹಂತದಲ್ಲಿದ್ದು, ಸದ್ಯದಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಇದಕ್ಕೆ 2 ವಾರ ಕಾಲಾವಕಾಶ ನೀಡಬೇಕೆಂದು ಕೋರಿದರು.

ಹೇಳಿಕೆ ಪರಿಗಣಿಸಿದ ಪೀಠ, ಮ್ಯಾಜಿಸ್ಟ್ರೇಟ್ ತನಿಖಾ ವರದಿ ಆಧರಿಸಿ, ತಪ್ಪಿತಸ್ಥರ ವಿರುದ್ಧ ಕೈಗೊಳ್ಳುವ ಕ್ರಮಗಳ ಕುರಿತ ವರದಿಯನ್ನು ಸರ್ಕಾರ ಆಗಸ್ಟ್ 25ರ ಒಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆ ಬಳಿಕ ವರದಿಯಲ್ಲಿರುವ ವಿಷಯಗಳನ್ನು ಬಹಿರಂಗಪಡಿಸುವ ಕುರಿತು ನ್ಯಾಯಾಲಯ ಯೋಚಿಸಲಿದೆ ಎಂದು ತಿಳಿಸಿ, ವಿಚಾರಣೆ ಮುಂದೂಡಿತು.

ಇದನ್ನು ಓದಿ:ಉದ್ಯಮಿ ವಿಜಯ್​ ಮಲ್ಯ ದಿವಾಳಿ: ಲಂಡನ್​ ಹೈಕೋರ್ಟ್ ಮಹತ್ವದ ಘೋಷಣೆ

ABOUT THE AUTHOR

...view details