ಬೆಂಗಳೂರು: ಕನ್ನಡ ಚಿತ್ರರಂಗ ಸೃಜನಾತ್ಮಕ ಕ್ಷೇತ್ರವಾಗಿದೆ. ಅದರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ರಾಜ್ಯಾದ್ಯಂತ ಚಲನಚಿತ್ರ ಮಂದಿರಗಳಲ್ಲಿ ಶೇ.100 ರಷ್ಟು ಆಸನಗಳ ಭರ್ತಿಗೆ ಅವಕಾಶ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡ ಸಿನಿಮಾ ನಿರ್ಮಿಸುವುದೇ ಒಂದು ಸಾಹಸ. ಸಿನಿಮಾ ರಂಗದವರು ಆರ್ಥಿಕ ಸಂಕಷ್ಟದಲ್ಲಿರುವುದು ತಿಳಿದಿರುವ ವಿಷಯ. ಈ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಕೋವಿಡ್ ಸಾಂಕ್ರಾಮಿಕದಿಂದ ಎಲ್ಲರಿಗೂ ತೊಂದರೆಯಾಗಿದೆ. ಮುನ್ನೆಚ್ಚರಿಕೆ ಕೈಗೊಳ್ಳದಿದ್ದರೆ ಪುನಃ ಲಾಕ್‌ಡೌನ್ ಮಾಡಬೇಕಾಗುತ್ತದೆ. ಈ ಕುರಿತು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇತ್ತೀಚೆಗೆ ಚಿತ್ರೀಕರಣದ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಸ್ಟಂಟ್‌ಮನ್ ಒಬ್ಬರು ಮೃತಪಟ್ಟಿದ್ದು, ದುರದೃಷ್ಟಕರ ಎಂದ ಮುಖ್ಯಮಂತ್ರಿಗಳು, ಚಿತ್ರೀಕರಣದ ವೇಳೆ ಪಾಲಿಸಬೇಕಾದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸತಕ್ಕದ್ದು. ತಪ್ಪಿದ್ದಲ್ಲಿ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಲಾಗುವುದು ಎಂದು ಎಚ್ಚರಿಸಿದರು.