ಬೆಂಗಳೂರು: 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರಿ ಆದೇಶ ಹೊರಡಿಸಿದೆ. ಶೇ. 20ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಸರ್ಕಾರಿ ನೌಕರರು ಕಡೆಗೂ ಹೋರಾಟದ ಮೂಲಕ ಶೇ.17ರಷ್ಟು ವೇತನ ಹೆಚ್ಚಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
19.11.2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಆದೇಶ ಹೊರಡಿಸಿದೆ.
ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ 'ಮೂಲ ವೇತನ' ಎಂದರೆ ಸರ್ಕಾರಿ ನೌಕರರು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತವೇ ನೀಡಲಾಗಿದ್ದರೆ ಆ ಸ್ಥಗಿತ ವೇತನ ಬಡ್ತಿ, 2018ರ ಕರ್ನಾಟಕ ನಾಗರಿಕ ಸೇವಾ ಪರಿಷ್ಕೃತ ವೇತನ ನಿಯಮಗಳ ನಿಯಮ 3(ಸಿ) ಓದಿಕೊಂಡು ಏಳನೇ ನಿಯಮದ (3) ನೇ ಉಪನಿಯಮದ ಅವನಿಗೆ ನೀಡಲಾದ ವೈಯಕ್ತಿಕ ವೇತನ ಇದ್ದರೆ, ವೈಯಕ್ತಿಕ ವೇತನ ಹಾಗೂ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಭರ್ತಿ ಯಾವುದಾದರೂ ಇದ್ದಲ್ಲಿ ಅವುಗಳು ಸೇರುತ್ತವೆ. ಅಲ್ಲದೆ, ಮೂಲ ವೇತನಕ್ಕೆ ಮೇಲೆ ಸೂಚಿಸುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ದಗಳು ಸೇರಿಸತಕ್ಕದ್ದಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು / ಕುಟುಂಬ ನಿವೃತ್ತಿ ವೇತನದವರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು / ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023ರ ಏಪ್ರಿಲ್ ಒಂದರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ / ಕುಟುಂಬ ನಿವೃತ್ತಿ ವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಲು ಸಹ ಸರ್ಕಾರ ಆದೇಶ ಹೊರಡಿಸಿದೆ.