ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ/ ಉಪ ಚುನಾವಣೆಗೆ ಮತದಾನ ನಡೆಯುವ ಸೆಪ್ಟೆಂಬರ್ 3 ರಂದು ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ಮತದಾನ ಮಾಡಲು ಅವಕಾಶವಾಗುವಂತೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ಆಯಾಯ ನಗರ ಸ್ಥಳೀಯ ಸಂಸ್ಥೆಯ ಆಯಾ ವಾರ್ಡ್‌ನ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೆಪ್ಟೆಂಬರ್ 3 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
ವೇತನ ಸಹಿತ ರಜೆ: ಚುನಾವಣೆ ನಡೆಯುವ ವಾರ್ಡ್‌ನ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ಯಮಗಳು ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರ ಸಂಸ್ಥೆ ಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.
ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು, ಆದರೆ, ಚುನಾವಣೆ ನಡೆಯುತ್ತಿರುವ ವಾರ್ಡ್‌ನ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೆ. 3 ರಂದು ವೇತನ ಸಹಿತ ರಜೆ ನೀಡಲು ಆದೇಶಿಸಿದೆ.