ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರ ಮೇಲೆ ರಾಜ್ಯ ಸರ್ಕಾರ ಒತ್ತಡ ತಂತ್ರ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ಕೊರೊನಾ ಸೋಂಕು ಸಮುದಾಯಕ್ಕೆ ವ್ಯಾಪಿಸುವ ಭೀತಿಯಲ್ಲಿರುವಾಗ ಬೆದರಿಕೆಯ ಅಸ್ತ್ರ ಬಳಸುವ ಮೂಲಕ ಉಪನ್ಯಾಸಕರ ಜೀವದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸೂಕ್ತ ವಸತಿ, ಸಾರಿಗೆ ಮತ್ತು ಹೋಟೆಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಉಪನ್ಯಾಸಕರು ಮೌಲ್ಯಮಾಪನ ಮಾಡುವುದು ಬಲು ಕಷ್ಟ. ಯಾವುದೇ ಕನಿಷ್ಠ ಸೌಲಭ್ಯಗಳನ್ನು ಒದಗಿಸದೇ ಮೌಲ್ಯಮಾಪನಕ್ಕೆ ಒತ್ತಡ ತಂತ್ರ ಅನುಸರಿಸುತ್ತಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.