ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಆ ಮೂಲಕ ತಾಪಂ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಮತ್ತಷ್ಟು ವಿಳಂಬವಾಗಲಿದೆ.
ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 121 ಮತ್ತು ಸೆಕ್ಷನ್ 160ರ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ತಿದ್ದುಪಡಿ ಅಧ್ಯಾದೇಶಕ್ಕೆ ಆ. 20ರಂದು ರಾಜ್ಯಪಾಲರಿಂದ ಅಂಕಿತ ಬಿದ್ದಿದ್ದು, ಇದೀಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ:ಬಿಬಿಎಂಪಿ ಚುನಾವಣೆಗೆ ಆಗಸ್ಟ್ 25 ರಂದು ಮತದಾರರ ಕರಡು ಪಟ್ಟಿ ಪ್ರಕಟ
ತಿದ್ದುಪಡಿ ಕಾಯ್ದೆಗೆ ತರುತ್ತಿರುವ ಸುಗ್ರೀವಾಜ್ಞೆಯಂತೆ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 25 ಜಿ.ಪಂ. ಸದಸ್ಯರಿರಲಿದ್ದಾರೆ. ಇನ್ನು 7 ರಿಂದ 9.5 ಲಕ್ಷ ಜನಸಂಖ್ಯೆಗೆ ಕನಿಷ್ಠ 28 ಜಿ.ಪಂ ಸದಸ್ಯರು ಇರಲಿದ್ದಾರೆ. ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2022 ತರಲಾಗಿತ್ತು.
ಅದರಂತೆ, ಸೆಕ್ಷನ್ 121 ಪ್ರಕಾರ 2 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯ ಇರಬೇಕು. ಅದೇ ರೀತಿ 1 ಲಕ್ಷ ಮೀರಿದ ಹಾಗೂ 2 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯರಂತೆ ಕನಿಷ್ಠ 11 ಚುನಾಯಿತ ಸದಸ್ಯರು ಇರಬೇಕು.