ಬೆಂಗಳೂರು :2022-2023ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶಿಸಿದೆ. ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ.
ಈಗಾಗಲೇ 2022-23ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತು ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22,000 ಹಾಗೂ ಪ್ರೌಢಶಾಲೆಗಳಲ್ಲಿ 5,078ರಂತೆ ಒಟ್ಟು 27,078 ಅತಿಥಿ ಶಿಕ್ಷಕರುಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 8,000 ಅತಿಥಿ ಶಿಕರನ್ನು ಮತ್ತು ಪ್ರೌಢಶಾಲೆಗಳಲ್ಲಿ 2000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಕೋರಿದ್ದರು. ಆದರೆ, ಸರ್ಕಾರ ಹೆಚ್ಚುವರಿಯಾಗಿ ಪ್ರಾಥಮಿಕ ಶಾಲೆಗಳಿಗೆ 4,000 ಅತಿಥಿ ಶಿಕ್ಷಕರನ್ನು ಹಾಗೂ ಪ್ರೌಢಶಾಲೆಗಳಲ್ಲಿ ಹೆಚ್ಚುವರಿಯಾಗಿ 1,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
ಹೆಚ್ಚುವರಿ ಅತಿಥಿ ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ನೇಮಕ ಮಾಡಲು ಮಂಜೂರಾತಿ ನೀಡಲಾಗಿದೆ. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳ (1 ರಿಂದ 8ನೇ ತರಗತಿಗಳಿಗೆ) ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳ (9 ರಿಂದ 10ನೇ ತರಗತಿಗಳಿಗೆ) ಮೂಲಕವೇ ನೇಮಕ ಮಾಡಬೇಕು. ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾವಶ್ಯಕ ಖಾಲಿ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ ರದ್ದು: ವಾಯು ಮಾರ್ಗದಲ್ಲೇ ಸಂಚಾರ