ಬೆಂಗಳೂರು :ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿ, ಎಸ್‌ಐಟಿ ಮುಖ್ಯಸ್ಥರಾಗಿದ್ದ ಸೌಮೇಂದು ಮುಖರ್ಜಿ ವೈದ್ಯಕೀಯ ರಜೆ ಮೇಲೆ ತೆರಳಿದ್ದರು. ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ತನಿಖೆಯ ಉಸ್ತುವಾರಿ ನೀಡಲಾಗಿತ್ತು. ಇದೀಗ ಎಸ್‌ಐಟಿ ತನಿಖೆ ಪೂರ್ಣಗೊಂಡು ಅಂತಿಮ ವರದಿ ಸಿದ್ಧವಾಗಿದೆ.
ಆದರೆ, ಪ್ರಕರಣದ ಕುರಿತು ಹೈಕೋರ್ಟ್ ಮೇಲ್ವಿಚಾರಣೆ ನಡೆಸುತ್ತಿರುವುದರಿಂದ ತನಿಖಾ ವರದಿಯಯನ್ನು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ವಿಚಾರಣಾ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸುವುದಕ್ಕೆ ಹೈಕೋರ್ಟ್ ನಿರ್ಬಂಧವಿದೆ. ಎಸ್‌ಐಟಿಯು ಕಾಲ ಕಾಲಕ್ಕೆ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದೆ. ಹೀಗಾಗಿ, ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಎಸ್‌ಐಟಿಗೆ ಅನುಮತಿ ನೀಡಬೇಕು ಎಂದು ಕೋರಿದರು.