ಬೆಂಗಳೂರು : ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಅರ್ಜಿ ಸಂಬಂಧ ಪ್ರತಿಕ್ರಿಯಿಸಲು ಸರ್ಕಾರ ಕಾಲಾವಕಾಶ ಕೋರಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಸಿಬಿಐ ಮನವಿ ಪರಿಗಣಿಸಲು ಯಾವ ಕಾರಣಕ್ಕೆ ವಿಳಂಬವಾಗಿದೆ ಎಂಬುದರ ಕುರಿತು ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸುಮಾರು 65 ಕೋಟಿ ರೂ. ಮೌಲ್ಯದ ಆಸ್ತಿಗಳ ಮುಟ್ಟುಗೋಲಿಗೆ ಈಗಾಗಲೇ ಅನುಮತಿ ನೀಡಿದ್ದೀರಿ. 19 ಕೋಟಿ ರೂ. ಗಳಿಗೆ ಅನುಮತಿ ನೀಡಲು ವಿಳಂಬ ಏಕೆ? ಎಂದು ಪ್ರಶ್ನಿಸಿತು. ಆರೋಪಿ ಪ್ರಭಾವಿ ಎಂದು ವಿಳಂಬ ಸರಿಯಲ್ಲ ಎಂದು ತಿಳಿಸಿತು. ಆಗ ಸರ್ಕಾರಿ ವಕೀಲರು, ಯಾವ ಕಾರಣಕ್ಕೆ ವಿಳಂಬವಾಗಿದೆ ಎಂಬುದರ ಕುರಿತು ಮಾಹಿತಿ ಪಡೆದುಕೊಳ್ಳಬೇಕಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಜನವರಿ 12 ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು?:ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕಾಗಿ 2022ರ ಆಗಸ್ಟ್‌ನಲ್ಲಿ ಸಲ್ಲಿಸಿರುವ ಮನವಿಯನ್ನು ಶೀಘ್ರದಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಅಲ್ಲದೆ, ರೆಡ್ಡಿ ಮತ್ತವರ ಕುಟುಂಬಸ್ಥರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಅಕ್ರಮವಾಗಿ ಗಳಿಸಿರುವ ಆಸ್ತಿಗಳನ್ನು ಕ್ರಿಮಿನಲ್ ಕಾನೂನುಗಳ (ತಿದ್ದುಪಡಿ) ಸುಗ್ರೀವಾಜ್ಞೆ ಕಾಯಿದೆ 1994ರ ಅಡಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಮನವಿ ಮಾಡಬೇಕಾಗಿದೆ. ಆದ್ದರಿಂದ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸಲು ಅನುಮತಿ ನೀಡುವಂತೆ 2022ರ ಆಗಸ್ಟ್ 30ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಲಾಗಿದೆ. ಇದನ್ನು ಪರಿಗಣಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಸುಮಾರು 19.14 ಕೋಟಿ ಮೌಲ್ಯದ ಆಸ್ತಿಗಳನ್ನು ಅಕ್ರಮ ಎಂದು ಗುರುತಿಸಲಾಗಿದೆ. ಈ ಆಸ್ತಿಗಳನ್ನು ಮಾರಾಟ ಮಾಡುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ನಮ್ಮ ಮನವಿಯನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಈ ರೀತಿಯ ಆಸ್ತಿಗಳನ್ನು ಪರಾಭಾರೆಯಾದಲ್ಲಿ ನೊಂದಾಯಿಸದಂತೆ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಓಬಳಾಪುರಂ ಮೈನಿಂಗ್ ಕಂಪನಿ ಮತ್ತು ಅದರ ಸಹಭಾಗಿತ್ವದ ಮೈನಿಂಗ್ ಕಂಪನಿಗಳ ವಿರುದ್ದ ತನಿಖೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಾಣೆ ಮಾಡಿದ ಆರೋಪದಲ್ಲಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 198 ಕೋಟಿ ನಷ್ಟವುಂಟಾಗಿದೆ ಎಂದು ರೆಡ್ಡಿ ವಿರುದ್ಧ 2012ರಲ್ಲಿ ಆರೋಪ ಪಟ್ಟಿ ದಾಖಲಿಸಿದೆ.
ರೆಡ್ಡಿಗೆ ಸೇರಿದ್ದ ಸುಮಾರು 65.05 ಕೋಟಿ ರು.ಗಳ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ 2015ರಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. 2016ರಲ್ಲಿ ರಾಜ್ಯ ಸರ್ಕಾರ ಮನವಿಗೆ ಅನುಮೋದನೆ ನೀಡಿದೆ. ಇದರ ಆಧಾರದಲ್ಲಿ ಸಿಬಿಐ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದ್ದು, ಈ ಅರ್ಜಿ ವಿಚಾರಣಾ ಹಂತದಲ್ಲಿದೆ ಎಂದು ಸಿಬಿಐ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಓದಿ:ಯಲಹಂಕದ ಕೊಡಿಗೇಹಳ್ಳಿ ಸರ್ಕಾರಿ ಜಮೀನು ಒತ್ತುವರಿ: ಅಧಿಕಾರಿಗಳು ಸೇರಿ 8 ಜನರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ