ಬೆಂಗಳೂರು : ಕಾವೇರಿ ಹಾಗೂ ಮಹದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ನಾಳೆ ವಿಧಾನಸೌಧದಲ್ಲಿ ಕರೆಯಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆಯುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದಾರೆ.
ಕಾವೇರಿ ಹಾಗೂ ಮಹದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ನಾಳೆ ಸರ್ವ ಪಕ್ಷಗಳ ಮುಖಂಡರು ಹಾಗೂ ಸಂಸತ್ ಸದಸ್ಯರ (ಕೇಂದ್ರ ಸಚಿವರು ಸೇರಿದಂತೆ) ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಭಾಗವಹಿಸುವಂತೆ ಪತ್ರದ ಮೂಲಕ ಸಿಎಂ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಇಂತಹ ಸಂಕಷ್ಟದ ಸನ್ನಿವೇಶದಲ್ಲಿ ತಮಿಳುನಾಡಿಗೆ ನೀರು ಬಿಡಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಸರ್ಕಾರವನ್ನು ಸಂದಿಗ್ಧತೆಗೆ ಸಿಲುಕಿಸಿದ್ದು, ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ವಪಕ್ಷಗಳ ಮುಖಂಡರ ಸಭೆ ನಡೆಸಲಿದ್ದಾರೆ.
ಸರ್ವಪಕ್ಷಗಳ ಸಭೆ ಕರೆದ ಸಿಎಂ :ಕಾವೇರಿ ಸಂಕಷ್ಟ ಸೂತ್ರ ಹಾಗೂ ರಾಜ್ಯದ ರೈತರ ಹಿತರಕ್ಷಣೆ ಸಂಬಂಧ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಮಳೆಯ ಅಭಾವದಿಂದ ರಾಜ್ಯದಲ್ಲಿ ನೀರಿನ ಕೊರತೆಯಾಗಿದೆ. ಕುಡಿಯುವ ನೀರಿಗೂ ತೊಂದರೆಯಾಗಿದೆ. ಹೀಗಾಗಿ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದ್ದರೂ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಪ್ರತಿದಿನ 10 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ. ಈ ಆದೇಶ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿನ ನೀರನ್ನು ಬಿಡುಗಡೆ ಮಾಡಿದೆ. ನೀರು ಬಿಡುಗಡೆಗೆ ರೈತರು ಹಾಗೂ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.