ಬೆಂಗಳೂರು: 7ನೇ ಪರಿಷ್ಕೃತ ವೇತನ ಹಾಗೂ ಓಪಿಎಸ್ ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ತಮ್ಮ ಪಟ್ಟು ಬಿಗಿಗೊಳಿಸಿದ್ದು, ಮಾರ್ಚ್ 1ರಿಂದ ರಾಜ್ಯಾದ್ಯಂತ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆ ನಡೆಸಿ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ. ಈ ಸಭೆಯಲ್ಲಿ ಪ್ರಮುಖವಾಗಿ ಏಳನೇ ವೇತನ ಆಯೋಗದ ಮದ್ಯಂತರ ವರದಿ ಪಡೆದು 40% ಫಿಟ್‌ಮೆಂಟ್ ಸೌಲಭ್ಯವನ್ನು ದಿನಾಂಕ 1.07.2022 ರಿಂದ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ರಾಜಸ್ತಾನ, ಛತ್ತೀಸಗಡ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಕರ್ನಾಟಕ ರಾಜ್ಯದಲ್ಲಿಯೂ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ನೋಟಿಸ್ ನೀಡಿದ್ದು, ಬೇಡಿಕೆ ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.