ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ 2019ರ ಡಿ. 19ರಂದು ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖೆ ಮಾ. 24ಕ್ಕೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಗೋಲಿಬಾರ್ ಘಟನೆಯನ್ನು ಎಸ್‍ಐಟಿ ತನಿಖೆಗೆ ವಹಿಸಲು ಕೋರಿ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವಡಗಿ, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟ್ರೇಟ್ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 74 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಮಾ. 24ರೊಳಗೆ ತನಿಖೆ ಪೂರ್ಣಗೊಳ್ಳಲಿದೆ ಎಂದು ಪೀಠಕ್ಕೆ ತಿಳಿಸಿದರು. ಅಲ್ಲದೇ, ಘಟನೆಯಲ್ಲಿ ಮರಣ ಹೊಂದಿದ ವ್ಯಕ್ತಿಗಳ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳು ಪೊಲೀಸರ ವಿರುದ್ಧ ಸಲ್ಲಿಸಿರುವ ದೂರುಗಳ ಬಗ್ಗೆ ಒಂದು ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದ್ದು, ಅದರ ತನಿಖೆಯೂ ನಡೆಯತ್ತಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸಂತ್ರಸ್ತರು ಕೊಟ್ಟಿರುವ ದೂರು ಸುಳ್ಳು ಎಂದು ಪೊಲೀಸ್ ಠಾಣಾಧಿಕಾರಿ (ಎಸ್‍ಹೆಚ್‍ಒ) ಬರೆದು ಕೊಟ್ಟಿರುವ`ಹಿಂಬರಹ' ವಾಪಸ್ ಪಡೆದುಕೊಳ್ಳಬೇಕಾಗುತ್ತದೆ. ಯಾವುದೇ ಪ್ರಾಥಮಿಕ ತನಿಖೆ ಇಲ್ಲದೆಯೇ ದೂರು ಸುಳ್ಳು ಎಂದು ನಿರ್ಧಾರಕ್ಕೆ ಬರುವುದು ಹೇಗೆ ಎಂದು ಪ್ರಶ್ನಿಸಿತು. ಜತೆಗೆ, ಹಿಂಬರಹ ವಾಪಸ್ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿತು. ಇದಕ್ಕೆ ಅಡ್ವೋಕೇಟ್ ಜನರಲ್ ಸಹಮತ ವ್ಯಕ್ತಪಡಿಸಿದರು.