ಬೆಂಗಳೂರು: ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಸಂಸ್ಥೆಗೆ 3,667 ಎಕರೆ ಸರ್ಕಾರಿ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮುಂದಿನ ಎರಡು ವಾರ ಯಥಾಸ್ಥಿತಿ ಕಾಯ್ದುಕೊಳ್ಳುತ್ತೇವೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.
ಹಿಂದಿನ ವಿಚಾರಣೆ ವೇಳೆ ವ್ಯಾಜ್ಯ ಇತ್ಯರ್ಥಗೊಳ್ಳುವವರೆಗೆ ಭೂಮಿ ಪರಭಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ನೀಡದ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸುವಂತೆ ನ್ಯಾಯಾಲಯ ತಾಕೀತು ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ನ್ಯಾಯಾಲಯಕ್ಕೆ ಇಂದು ಎರಡು ವಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿತು. ಹೇಳಿಕೆ ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಿತು.
ಇಂದು ನಡೆದ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಪತ್ರ ಆಧರಿಸಿ ಎರಡು ವಾರಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು. ಆಕ್ಷೇಪಣೆ ಸಲ್ಲಿಸಲು ಇನ್ನು ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಎರಡು ವಾರ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಹೇಳಿ ಆಕ್ಷೇಪಣೆಗೆ ನಾಲ್ಕು ವಾರ ಸಮಯ ಕೇಳಿದರೆ ಹೇಗೆ, ಎರಡು ವಾರ ಆದ ಮೇಲೆ ನೀವು ಸೇಲ್ ಡೀಡ್ ಮಾಡಿಕೊಡುವುದಿಲ್ಲ ಎಂಬುದಕ್ಕೆ ಖಾತ್ರಿ ಏನೆಂದು ಪ್ರಶ್ನಿಸಿತು.