ಬೆಂಗಳೂರು:ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಾರೆ. ಆದರೆ ಅವರ ಕಷ್ಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದ ಮುಂಭಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ಅವರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ನಮ್ಮ ಸರ್ಕಾರ ಇದ್ದಾಗ ಕನಿಷ್ಠ ಆರು ಸಾವಿರ ರೂಪಾಯಿ ವೇತನ ನೀಡಿದ್ದೆವು. ಇದನ್ನು ಹೆಚ್ಚಿಸಲೇಬೇಕಿದೆ. ಇವರನ್ನು ವಾರಿಯರ್ ಗಳು ಎಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಹೇಳಿರುವಾಗ ವೇತನದ ವಿಚಾರದಲ್ಲಿ ತಾರತಮ್ಯ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಗೊಂದಲದ ಹೇಳಿಕೆ:
ರಾಜ್ಯದ ಸಚಿವರು ಗೊಂದಲ ಹೇಳಿಕೆ ಕೊಡುತ್ತಿದ್ದಾರೆ. ಈ ಸಂಕಷ್ಟದಲ್ಲಿ ಸರಿಯಾಗಿ ಕೆಲಸ ಮಾಡಿದ್ರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿತ್ತು. ಇಂದು ಕೊರೊನಾ ನಿಯಂತ್ರಣ ವಿಚಾರದಲ್ಲಿ ಕೇರಳ ಮಾದರಿ ರಾಜ್ಯವಾಗಿದೆ. ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಇಚ್ಛಾಶಕ್ತಿ ಕೊರತೆ ಇದೆ. ಅಧಿಕಾರಿಗಳನ್ನು ಸರಿಯಾಗಿ ಬಳಸಿಕೊಂಡು ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಒಂದು ವರ್ಷದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಮಾಡಿಲ್ಲ ಎಂದು ತಿಳಿಸಿದರು.