ಬೆಂಗಳೂರು: ತನಿಖೆ ಪ್ರಗತಿಯಲ್ಲಿರುವಾಗಲೇ ಆರೋಪಿಗಳು ಹಾಗೂ ನೊಂದವರ ವಿವರಗಳ ಬಗ್ಗೆ ಮಾಧ್ಯಮಗಳಿಗೆ ಸೋರಿಕೆ ಮಾಡಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ತನಿಖೆ ಪೂರ್ಣಗೊಳ್ಳುವವವರೆಗೆ ಆರೋಪಿತರ ಹಾಗೂ ನೊಂದವರ ಬಗ್ಗೆ ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಕೂಡದು. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಆರೋಪಿಗಳ ಭಾವಚಿತ್ರ, ವೈಯಕ್ತಿಕ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿ ಸೋರಿಕೆ ಮಾಡುವುದು ಕಂಡು ಬಂದರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸುಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ತಿಳಿಸಿದ್ದಾರೆ.
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಪೊಲೀಸರು ತನಿಖೆ ಮುಗಿದು ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವವರೆಗೂ ಆರೋಪಿಗಳ ಭಾವಚಿತ್ರ, ವಿಡಿಯೋ ಹಾಗೂ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಈ ಬಗ್ಗೆ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತ್ತು. ಇದರಂತೆ ಗೃಹ ಇಲಾಖೆಯ ಹೊಸ ಆದೇಶ ಹೊರಡಿಸಿದೆ.