ಬೆಂಗಳೂರು: ಬಿಬಿಎಂಪಿ ಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರಿಗೆ 110 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಅಮೃತ ನಗರೋತ್ಥಾನ ಹಂತ 4ರ 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಬಿಬಿಎಂಪಿ ಮೀಸಲಾತಿ ಕರಡು ಹೊರಬಿದ್ದಿದ್ದು, ಯಾವಾಗ ಬೇಕಾದರೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ಬಿಜೆಪಿ ಈಗಾಗಲೇ ಎರಡು ಮೂರು ಸಭೆ ನಡೆಸಿ ಟಾರ್ಗೆಟ್ ನಿಗಿದಿಪಡಿಸಿಕೊಂಡು ಅಖಾಡಕ್ಕೆ ಇಳಿದ ಬೆನ್ನಲ್ಲೇ ಸರ್ಕಾರ 110 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ, ದಾಸರಹಳ್ಳಿ ಶಾಸಕ ಮಂಜುನಾಥ್, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
(ಇದನ್ನೂ ಓದಿ: ಕಮಿಷನ್ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಲಿ, ತನಿಖೆಯಾಗಲಿ ಎಂದ ಸಿಎಂ ಬೊಮ್ಮಾಯಿ)