ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಬಂದಿಲ್ಲ. ಸಂಬಳವನ್ನೇ ನಂಬಿರುವ ಅವರ ಬದುಕು ದುಸ್ತರವಾಗಿದೆ.
ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇ.50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೊನಾ ವೈರಸ್ ಸೋಂಕಿತರಾಗಿದ್ದಾರೆ.
ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.