ಬೆಂಗಳೂರು: ಮತಾಂತರ ನಿಷೇಧ, ಗೋಹತ್ಯೆ ಕಾಯ್ದೆ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಸಿಡಿದೆದ್ದಿದ್ದು, ಕರ್ನಾಟಕದಾದ್ಯಂತ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಶುಕ್ರವಾರ ಸಂಜೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು. ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ಕಾಯ್ದೆ ರದ್ದು, ಪಠ್ಯಪರಿಷ್ಕರಣೆಗೆ ಸಮ್ಮತಿ ನೀಡಿರುವುದಕ್ಕೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಾತ್ರವಲ್ಲ, ವಿಶ್ವ ಹಿಂದೂ ಪರಿಷತ್ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ ಎಂದು ಪ್ರತಿಭಟನೆ ವೇಳೆ ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಯೋಜಕ ಗೋವರ್ಧನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂಗಳ ಜೊತೆಗೆ ಇತರ ಧರ್ಮದವರಿಂದ ಅಧಿಕಾರಕ್ಕೆ ಬಂದಿದೆ, ಅಲ್ಪಸಂಖ್ಯಾತರ ಮತಗಳಿಂದ ಅಧಿಕಾರಕ್ಕೆ ಬಂದಿಲ್ಲ. ಕಾಂಗ್ರೆಸ್ ಈ ನಡೆ ಸಮಸ್ತ ಹಿಂದೂಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿದರು.
ಕಾನೂನು ಚೌಕಟ್ಟಿನಲ್ಲಿ ರಾಜ್ಯಾದ್ಯಂತ ಶಾಂತಿಯುತ ಪ್ರತಿಭಟನೆ ನೆಡೆಸುತ್ತಿದ್ದೇವೆ. ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟಲು 2022 ಮೇ ನಲ್ಲಿ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಇದೀಗ ಈ ಕಾಯ್ದೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ತೀರ್ಮಾನಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಬಿಜೆಪಿ ಅವಧಿಯಲ್ಲಿ ನಡೆದ ಕೆಲವು ಕಾನೂನು ಬದಲಾವಣೆ ಮಾಡುವ ಬಗ್ಗೆ ತೀರ್ಮಾನಿಸಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡಲು ಹೊರಟಿದೆ ಎಂದು ದೂರಿದರು.
ಮುಸ್ಲಿಂ ಮತ್ತು ಕ್ರೈಸ್ತ ಮತಾಯುಯಾನಿಗಳ ಓಲೈಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್, ಭಜರಂಗದಳ ಖಂಡಿಸುತ್ತದೆ. ಕೇರಳ ಸ್ಟೋರಿಯಲ್ಲಿ ಕೂಡ ಮತಾಂತರದ ಕುರಿತು ಹೇಳಲಾಗಿದೆ. ಎಸ್ಡಿಪಿಐ ಪಿಎಫ್ಐನ ಅಜೆಂಡಾ ಕೂಡ ಮತಾಂತರವಾಗಿದೆ. ಸದ್ಯ ವಿಭಜನೆಯ ಕಾಲದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಅಭಿಮತ ವ್ಯಕ್ತಪಡಿಸಿದ್ದಾರೆ.