ಬೆಂಗಳೂರು: ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ ರೂ. 2000 ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ, ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನಸೌಧಸಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸ್ಪಷ್ಟನೆ ನೀಡಿದ ಅವರು, "ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ಬಗ್ಗೆ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚೆ ಮಾಡಲಾಗಿದೆ. ಹಿರಿಯ ಸಚಿವರು ಮತ್ತು ಅಧಿಕಾರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ (ಜೂನ್ 15) ಈ ಯೋಜನೆಯನ್ನು ಲೋಕಾರ್ಪಣೆ ಮಾಡಲು ಸರ್ಕಾರ ಎಲ್ಲ ರೀತಿಯಿಂದಲೂ ಸಜ್ಜಾಗಿತ್ತು. ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಭವನದಲ್ಲಿ ಸೇವಾ ಸಿಂಧು ವೆಬ್ಸೈಟ್ ಲಾಂಚ್ ಮಾಡುವವರಿದ್ದರು. ಆದರೆ, ಕೆಲವು ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆಗೆ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆ ಇದೆ" ಎಂದರು.
"ನಾವು ಈಗಾಗಲೇ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮೂಲಕ ಭೌತಿಕವಾಗಿ ಕೂಡ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದೆವು. ಆದರೆ, ಜನಸಾಮಾನ್ಯರಿಗೆ ಇದರಿಂದ ಬಹಳ ತೊಂದರೆಯಾಗುತ್ತದೆ ಎಂಬುದನ್ನು ಅಧಿಕಾರಿಗಳು ಹಾಗೂ ಸಚಿವರು ತಿಳಿಸಿದ್ದಾರೆ. ನಾಡಕಚೇರಿ, ಬಾಪುಜಿ ಸೇವಾ ಕೇಂದ್ರದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ತೀರ್ಮಾನ ಮಾಡಲಾಗಿದೆ. ಈ ಯೋಜನೆಯಿಂದ 1.28 ಕೋಟಿ ಜನರಿಗೆ ಅನುಕೂಲವಾಗಲಿದೆ. ಫಲಾನುಭವಿಗಳು ಅರ್ಜಿ ಸಲ್ಲಿಸುವಿಕೆಯ ಒತ್ತಡ ಹೆಚ್ಚಾಗಲಿದೆ ಎಂಬ ಸಲಹೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತು ಯೋಜನೆ ಇನ್ನೂ ಸ್ವಲ್ಪ ಸರಳವಾಗಿ ದೊರೆಯಲಿ ಎಂಬ ಸದುದ್ದೇಶದಿಂದ ನಾಲ್ಕೈದು ದಿನ ವಿಳಂಬವಾಗಲಿದೆ".