ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗೋಷ್ಟಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಕಾರ್ಯ ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಯೋಜನೆಗೆ ಜುಲೈ 19ರಂದು (ಬುಧವಾರ) ಚಾಲನೆ ಸಿಗಲಿದೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಅಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುವರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಆ್ಯಪ್ ಸಿದ್ಧವಾಗಿದೆ. ಜುಲೈ 19ರಿಂದ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು. ಫಲಾನುಭವಿಗಳ ಖಾತೆಗೆ ನೇರ ಹಣ ಪಾವತಿಸಲಾಗುವುದು. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಗೊಂದಲ ಬೇಡ ಎಂದರು. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ "ಯಜಮಾನಿ ಮಹಿಳೆ" ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗೋಷ್ಟಿ ನೋಂದಣಿ ಪ್ರಕ್ರಿಯೆ ಹೇಗೆ?:ಈಗಾಗಲೇ ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ಅಥವಾ ಬೆಂಗಳೂರು-ಒನ್ ಕೇಂದ್ರವಾಗಿರುತ್ತದೆ. ಪರ್ಯಾಯವಾಗಿ 'ಪ್ರಜಾಪ್ರತಿನಿಧಿ' (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ಮಾಹಿತಿ ನೀಡಿದರು.
ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ, ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS / ವಾಟ್ಸ್ ಆ್ಯಪ್ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ-ಒನ್ / ಬಾಪೂಜಿ ಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಬೇಕಾಗಿರುವ ದಾಖಲೆಗಳು:ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ.
ಗ್ರಾಮ್-ಒನ್ / ಬಾಪೂಜಿ ಕೇಂದ್ರ/ ಕರ್ನಾಟಕ ಒನ್ / ಬೆಂಗಳೂರು ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು. ಮೇಲಿನಂತೆ ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್ / ಬಾಪೂಜಿ ಕೇಂದ್ರ/ ಕರ್ನಾಟಕ- ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು. ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್ /ಬಾಪೂಜಿ ಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು-ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೋಂದಾಯಿಸಲು ಪ್ರಯತ್ನಿಸಿದರೆ ಈಗಾಗಲೇ ನೋಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ ಎಂದು ವಿವರಿಸಿದರು.
ನೋಂದಣಿ ಉಚಿತ:ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಸಿಕ 2 ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಛಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ 'ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ.ಗಳನ್ನು ಆರ್ಟಿಜಿಎಸ್ ಮೂಲಕ ಜಮೆ ಮಾಡಲಾಗುವುದು. ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ ಎಂದು ಅವರು ಹೇಳಿದರು.
ಅಂತಿಮ ದಿನಾಂಕ & ಸಮಯ ನಿಗದಿಪಡಿಸಿಲ್ಲ:ಗೃಹಲಕ್ಷ್ಮಿ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ / ಸಮಯಕ್ಕೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ / ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅಂದಾಜು 30 ಸಾವಿರ ಕೋಟಿ ರೂ. ಅಗತ್ಯವಿದೆ. ಪ್ರಸಕ್ತ ಮುಂಗಡ ಪತ್ರದಲ್ಲಿ 17,500 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ಇದನ್ನೂ ಓದಿ:ನಾಲ್ಕೈದು ದಿನದಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸ್ವೀಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಯೋಜನೆ ಷರತ್ತುಗಳು:ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆ ನೀಡುವುದಾಗಿ ಕಾಂಗ್ರೆಸ್ ನಾಯಕರು ಚುನಾವಣೆಗೆ ಮುನ್ನವೇ ಗ್ಯಾರಂಟಿಯಾಗಿ ಘೋಷಿಸಿದ್ದರು. ಈ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಅವುಗಳು ಹೀಗಿವೆ..
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
- ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
- ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ಗಳನ್ನು ಜೋಡಣೆ ಮಾಡಬೇಕು
- ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
- ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ದಾಖಲೆ ಅಗತ್ಯ: ಗೃಹ ಲಕ್ಷ್ಮಿ ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಬಯಸಲಾಗಿದೆ. ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ. ಮನೆಯ ಯಜಮಾನಿಗೆ ಆರ್ಥಿಕ ಬಲ ತುಂಬುವ ಈ ಮಹತ್ವದ ಯೋಜನೆ ಜಾರಿಗೆ ತರಲು ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ತೀರ್ಮಾನಿಸಲಾಗಿತ್ತು.
ಇದನ್ನೂ ಓದಿ:ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : ವಿಧಿಸುವ ಷರತ್ತುಗಳು ಏನು ಗೊತ್ತಾ?