ಬೆಂಗಳೂರು: ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಠೇವಣಿದಾರರ ಹಣ ದುರ್ಬಳಕೆ ಮಾಡಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ನಡೆಸಿರುವ ತನಿಖಾ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಿದೆ.
ಹಗರಣದ ತನಿಖೆಯನ್ನು ಡಿಐಜಿ ಹಂತದ ಅಧಿಕಾರಿಗಳ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್. ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಪ್ರಕರಣದ ಸಂಬಂಧ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಸ್ಪಿ ತನಿಖೆ ನಡೆಸಿ ಸಿದ್ಧಪಡಿಸಿದ್ದ ವರದಿಯನ್ನು ಹಾಗೂ ಇಡಿ ಅಧಿಕಾರಿಗಳು ಈವರೆಗೆ ಕ್ರಮ ಜರುಗಿಸಿರುವ ವರದಿಯನ್ನು ಸರ್ಕಾರದ ಪರ ವಕೀಲರು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು. ವರದಿ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಮುಂದೂಡಿತು.
ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ, ಗುರು ರಾಘವೇಂದ್ರ ಸಹಕಾರಿ ಬಾಂಕ್ನ ಆಡಳಿತ ಮಂಡಳಿ ಸದಸ್ಯರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಕುರಿತು ತನಿಖೆ ನಡೆಸುವಂತೆ ಸಿಐಡಿಗೂ ಮತ್ತು ಹಗರಣದ ರೂವಾರಿಗಳಾದ ಆಡಳಿತ ಮಂಡಳಿ ಸದಸ್ಯರ ಆಸ್ತಿ ಮತ್ತು ಬ್ಯಾಂಕ್ ಖಾತೆಗಳ ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೂ ಆದೇಶಿಸಿತ್ತು. ಪ್ರಕರಣದ ಹಿನ್ನೆಲೆ, ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಠೇವಣಿದಾರರ ಒಟ್ಟು 1,650 ಕೋಟಿ ಹಣವನ್ನು ಯಾವುದೇ ಅಡಮಾನ ಅಥವಾ ಖಾತರಿ ಇಲ್ಲದೇ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ನಕಲಿ ಖಾತೆದಾರರಿಗೆ ಸಾಲ ನೀಡಿದೆ ಎಂದು ಆರೋಪಿಸಲಾಗಿದೆ.
ಹಾಗೆಯೇ ಠೇವಣಿದಾರರಿಗೆ ಹಣ ಹಿಂದಿರುಗಿಸದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವ್ಯವಹಾರ ಪ್ರಕರಣದ ತನಿಖೆಯನ್ನು ಡಿಜಿಪಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಲು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.