ಬೆಂಗಳೂರು: ಹಾಸನ ವಿಧಾನಸಭೆ ಕ್ಷೇತ್ರದ ಟಿಕೆಟ್ ವಿಚಾರ ಇನ್ನೂ ಗೊಂದಲದಲ್ಲೇ ಮುಂದುವರೆದಿದ್ದು, ಸಮಸ್ಯೆ ಅಂತಿಮವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಅಂಗಳಕ್ಕೆ ಬಂದು ನಿಂತಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಯಬೇಕಿತ್ತು. ಆದರೆ, ಅವರ ಕುಟುಂಬ ಸದಸ್ಯರ ಒತ್ತಡ ಬಂದ ಹಿನ್ನೆಲೆಯಲ್ಲಿ ರದ್ದುಗೊಂಡಿತ್ತು.
ಟಿಕೆಟ್ ಗೊಂದಲ ಪರಿಹರಿಸಲು ಮುಂದಿನ ವಾರ ದೇವೇಗೌಡರ ನಿವಾಸದಲ್ಲಿ ಸಭೆ ನಡೆಯುವ ಸಾಧ್ಯತೆಗಳಿವೆ. ಗೌಡರ ಕುಟುಂಬಕ್ಕೆ ಹತ್ತಿರ ಇರುವ ನಾಯಕರೊಬ್ಬರು ಎರಡೂ ಕಡೆಯವರ ಜೊತೆ ಸಮನ್ವಯ ಸಾಧಿಸಿ ಬಿಕ್ಕಟ್ಟು ಶಮನಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರೇವಣ್ಣ ಕುಟುಂಬದ ಪಟ್ಟು: ಹಾಸನ ಮತ್ತು ಹೊಳೆನರಸೀಪುರ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್‌ಗೆ ಹೆಚ್.ಡಿ.ರೇವಣ್ಣ ಕುಟುಂಬ ಪಟ್ಟು ಹಿಡಿದಿದೆ. ಈ ಸಮಸ್ಯೆಯನ್ನು ಬಗೆಹರಿಸುವ ಕುರಿತು ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, ಕುಮಾರಸ್ವಾಮಿ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಕುಟುಂಬಕ್ಕಿಂತ ಪಕ್ಷದ ಕಾರ್ಯಕರ್ತರು ಮುಖ್ಯ ಎಂದು ಹೇಳುತ್ತಿದ್ದಾರೆ. ಮುಂದಿನ ವಾರದೊಳಗೆ ಈ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆ ಗೋಚರಿಸಿದೆ.
ಮುಸ್ಲಿಂ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಆ ಸಮುದಾಯದ ಪ್ರಾಬಲ್ಯ ಇರುವ ಸುಮಾರು 40 ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸಲು ಮುಂದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಮುಸ್ಲಿಂ ಸಮುದಾಯ ಹೆಚ್ಚಿರುವ ಕ್ಷೇತ್ರಗಳ ಹೊಣೆ ನೀಡಲು ಪಕ್ಷ ತೀರ್ಮಾನಿಸಿದೆ. ಈಗಾಗಲೇ ಚುನಾವಣೆ ಕಾವು ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆಸಿರುವ ಸಮೀಕ್ಷೆಯಲ್ಲಿ ಮುಸ್ಲಿಂ ಸಮುದಾಯದಲ್ಲಿ ವಿಶ್ವಾಸ ಮೂಡಿಸಬೇಕಿದೆ ಎಂಬ ಅಂಶ ವ್ಯಕ್ತವಾಗಿದ್ದು ಸಿ.ಎಂ.ಇಬ್ರಾಹಿಂ ಅವರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.