ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಮನೆ ಬಳಿಯೇ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ನ ಬೆಂಗಳೂರು ಪೀಠದಲ್ಲಿ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಆದರೂ ಗರ್ಭಿಣಿಯಾಗಿರುವ ವಕೀಲೆ ನೇತ್ರಾವತಿ ಎಂಬುವವರು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನವೆಂಬರ್ 18 ಮತ್ತು 19ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ನೇತ್ರಾವತಿ ಅವರು ಎಂಟೂವರೆ ತಿಂಗಳ ಗರ್ಭಿಣಿ ಆಗಿರುವುದರಿಂದ ಅವರ ಆರೋಗ್ಯ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪ್ರವಾಸ ಮಾಡಲಾಗದು. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಪಿ. ಎಸ್. ದಿನೇಶ್ ಕುಮಾರ್, ಕೆ. ಸೋಮಶೇಖರ್, ಎಸ್. ಸುನಿಲ್ ದತ್ ಯಾದವ್, ಅಶೋಕ್ ಎಸ್. ಕಿಣಗಿ ಮತ್ತು ಎಂ ನಾಗಪ್ರಸನ್ನ ಅವರನ್ನು ಒಳಗೊಂಡ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯು ನೇತ್ರಾವತಿ ಅವರ ಕೋರಿಕೆಗೆ ಒಪ್ಪಿಗೆ ಸೂಚಿಸಿದ್ದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳೂ ಅನುಮತಿ ನೀಡಿದ್ದಾರೆ.