ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಕೈಗೊಳ್ಳುವ ಕ್ರಮಗಳ ಕುರಿತು ಮುಂದಿನ ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳದಿರುವುದನ್ನು ಪ್ರಶ್ನಿಸಿ ನಗರದ ಸಮರ್ಪಣಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಈ ಸಂಬಂಧ ಸೆ.16ರಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆ ನಡೆಸಲಾಗಿದೆ. ಸದ್ಯ ಸರ್ಕಾರದ ಬಳಿ ಎಷ್ಟು ಭೂಮಿ ಲಭ್ಯವಿದೆಯೋ ಅಲ್ಲಿಯವರೆಗೆ ರಸ್ತೆ ವಿಸ್ತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸಿದರು.
ಇದನ್ನೂ ಓದಿ:'ಶೈಕ್ಷಣಿಕ ಸಂಸ್ಥೆಯ ಅನುದಾನ ತಡೆಗೆ ನಿರ್ದೇಶಿಸಲು ಎಸ್ಸಿ-ಎಸ್ಟಿ ಆಯೋಗಕ್ಕೆ ಅಧಿಕಾರವಿಲ್ಲ'
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರದ ಬಳಿ ಎಷ್ಟು ಭೂಮಿ ಇದೆ ಎಂಬುದನ್ನು ತಿಳಿಸಿಲ್ಲ. ಎಲ್ಲಿಂದ ಎಲ್ಲಿಯವರೆಗೂ ರಸ್ತೆ ವಿಸ್ತರಣೆ ಮಾಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ವಿವರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿತು. ಅಲ್ಲದೇ, ಈ ಬಗ್ಗೆ ಮುಂದಿನ ಮೂರು ವಾರಗಳಲ್ಲಿ ವಿವರವಾದ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿತು.
ಪ್ರಮಾಣ ಪತ್ರದಲ್ಲಿ ಏನಿದೆ?
- ರಾಜ್ಯ ಸರ್ಕಾರದ ವಶದಲ್ಲಿರುವ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭಿಸಲು ಮೊದಲ ಆದ್ಯತೆ ನೀಡಲಾಗುವುದು.
- ಈ ಮಾರ್ಗದಲ್ಲಿ ಅಗತ್ಯ ಇರುವಲ್ಲಿ ಮೇಲ್ಸೇತುವೆ ಮತ್ತು ಅಂಡರ್ ಪಾಸ್ಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು.
- ಅರಮನೆ ಮೈದಾನದಲ್ಲಿರುವ ಕಲ್ಯಾಣ ಮಂಟಪಗಳ ಪ್ರವೇಶಕ್ಕೆ ಪರ್ಯಾಯ ಮಾರ್ಗವನ್ನು ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.
- ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿ ಸಂಚಾರ ದಟ್ಟಣೆ ಇಲ್ಲದಂತೆ ವೈಜ್ಞಾನಿಕ ಆಧಾರದಲ್ಲಿ ವ್ಯವಸ್ಥೆ ಮಾಡುವ ಕುರಿತು ಕ್ರಮಗಳನ್ನು ಕೈಗೊಳ್ಳಲಾಗುವುದು.
ಪ್ರಕರಣವೇನು?:ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಬಳ್ಳಾರಿ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪರೀತ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದೆ. 2016ರಲ್ಲಿ ಸರ್ಕಾರ ತಿಳಿಸಿರುವಂತೆ ರಸ್ತೆಯಲ್ಲಿ ನಿತ್ಯವೂ 60ರಿಂದ 75 ಸಾವಿರ ವಾಹನಗಳು ಸಂಚರಿಸುತ್ತವೆ.
ಅರಮನೆ ಮೈದಾನದಲ್ಲಿ ಮದುವೆ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ವಾಹನ ಸಂಚಾರ ಮತ್ತಷ್ಟು ಕಠಿಣವಾಗುತ್ತಿದೆ. ಸಂಜೆ ಮತ್ತು ಬೆಳಗ್ಗೆ ಸಮಯದಲ್ಲಿ ಹೆಬ್ಬಾಳದಿಂದ ಬಿಡಿಎ ಜಂಕ್ಷನ್ವರೆಗೆ ವಾಹನಗಳ ಸಂಚರಿಸುವುದೇ ಕಷ್ಟವಾಗಿದೆ. ಆದ್ದರಿಂದ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ:ತನಿಖೆಗೆ ವಶಪಡಿಸಿಕೊಂಡ ಚಿನ್ನಾಭರಣಗಳನ್ನು 15 ರಿಂದ 1 ತಿಂಗಳು ಮಾತ್ರ ಪೊಲೀಸರ ವಶದಲ್ಲಿರಬೇಕು: ಹೈಕೋರ್ಟ್