ಬೆಂಗಳೂರು :ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಚಿವ ಹಾಗೂ ಪ್ರಕರಣದ ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 6ರಂದು ಹೊರಡಿಸಿದ್ದ ಆದೇಶ ಹಾಗೂ ಸಿಬಿಐ ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಪ್ರಕರಣದ ಆರೋಪಿಗಳಾದ ವಿನಯ್ ಕುಲಕರ್ಣಿ, ಬಸವರಾಜ ಶಿವಪ್ಪ ಮುತ್ತಗಿ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ವೀರಪ್ಪ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪೀಠ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ತನಿಖೆ ಅಗತ್ಯ ಮನಗಂಡು ಸಿಬಿಐ ತನಿಖೆಗೆ ವಹಿಸಿರುವ ಕ್ರಮ ಸರಿಯಿದೆ. ಪ್ರಕರಣದಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಿಬಿಐ ಹೆಚ್ಚುವರಿ ಆರೋಪಪಟ್ಟಿಯಲ್ಲಿ ಆರೋಪಿತರು ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಿ, ಸಾಕ್ಷಿಗಳಿಗೆ ಬೆದರಿಸಿರುವುದಾಗಿ ತಿಳಿಸಿದೆ.
ವಿಚಾರಣಾ ನ್ಯಾಯಾಲಯ ಪ್ರಕರಣದ ಕಾಗ್ನಿಸೆನ್ಸ್ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಪ್ರಕರಣವನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾ ಮಾಡಿ ಆದೇಶಿಸಿದೆ. ಅಲ್ಲದೇ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.
ಅರ್ಜಿದಾರ ಆರೋಪಿಗಳು, ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವುದು ಸರಿಯಾದ ಕ್ರಮವಲ್ಲ. ರಾಜ್ಯ ಪೊಲೀಸರು ತನಿಖೆ ನಡೆಸಿ ದೋಷಾರೋಪಣೆ ಸಲ್ಲಿಸಿದ ನಂತರ ಮತ್ತೆ ಸಿಬಿಐ ತನಿಖೆಗೆ ಆದೇಶಿಸಿದೆ. ಒಂದೇ ಆರೋಪಕ್ಕೆ ಸಿಬಿಐ 2ನೇ ಎಫ್ಐಆರ್ ದಾಖಲಿಸಿರುವುದು ಕಾನೂನು ಸಮ್ಮತವಲ್ಲ.
ಈ ಹಿಂದೆ ಮೃತರ ಕುಟುಂಬದವರು ಸಿಬಿಐ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿದೆ. ಅದನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಹೀಗಿದ್ದರೂ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಕ್ರಮ ಸರಿಯಾದ್ದಲ್ಲ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಮೈ ಶುಗರ್ ಕಾರ್ಖಾನೆ ಖಾಸಗೀಕರಣ ಇಲ್ಲ, ಪುನಶ್ಚೇತನ ಸಂಬಂಧ ತಜ್ಞರ ಸಮಿತಿ ನೇಮಕ : ಸಿಎಂ ಬೊಮ್ಮಾಯಿ