ಕರ್ನಾಟಕ

karnataka

By

Published : Jan 14, 2022, 9:51 PM IST

ETV Bharat / state

ಈಜಿಪುರ ಮೇಲ್ಸೇತುವೆ ನಿರ್ಮಾಣ ವಿಳಂಬ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ತರಾಟೆ

ಮೇಲ್ಸೇತುವೆ ನಿರ್ಮಾಣ ವಿಳಂಬ ಪ್ರಶ್ನಿಸಿ ಕೋರಮಂಗಲ ನಿವಾಸಿ ಆದಿನಾರಾಯಣ ಶೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಬಿಬಿಎಂಪಿ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ತರಾಟೆ
ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜೀಪುರ ನಡುವೆ ಸಂಪರ್ಕ ಕಲ್ಪಿಸುವ ಈಜೀಪುರ ಮೇಲ್ಸೇತುವೆ ನಿರ್ಮಾಣ ಕಾರ್ಯದ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತಾ ಮುಂದಿನ ವಿಚಾರಣೆ ವೇಳೆ ಹಾಜರಾಗುವಂತೆ ನಿರ್ದೇಶಿಸಿದೆ.

ವಿಚಾರಣೆ ವೇಳೆ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪೀಠ, ಜವಾಬ್ದಾರಿ ನಿರ್ವಹಿಸಲು ಮುಖ್ಯ ಆಯುಕ್ತರಿಗೆ ಸಾಧ್ಯವಾಗದಿದ್ದರೆ ಹುದ್ದೆ ತೊರೆಯಬೇಕು. ಸಮರ್ಥ ಅಧಿಕಾರಿಗಳು ಅವರ ಸ್ಥಾನಕ್ಕೆ ಬರುತ್ತಾರೆ. ಯೋಜನೆ ಇಷ್ಟು ದಿನ ವಿಳಂಬವಾದರೂ ಬಿಬಿಎಂಪಿ ಮುಖ್ಯ ಆಯುಕ್ತರು ಏನು ಮಾಡುತ್ತಿದ್ದಾರೆ ಎಂದು ಕಟುವಾಗಿ ಪ್ರಶ್ನಿಸಿದೆ.

ಮೇಲ್ಸೇತುವೆ ನಿರ್ಮಾಣ ವಿಳಂಬ ಪ್ರಶ್ನಿಸಿ ಕೋರಮಂಗಲ ನಿವಾಸಿ ಆದಿನಾರಾಯಣ ಶೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಬಿಬಿಎಂಪಿ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ವಾದಿಸಿ, ಕಾಮಗಾರಿ ಪೂರ್ಣಗೊಳಿಸಲು ಸಾಕಷ್ಟು ಅಡೆತಡೆಗಳಿದ್ದವು. ಇದೀಗ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಅರಣ್ಯ ಇಲಾಖೆ ಕೆಲಸ ಪೂರ್ಣಗೊಳಿಸಿದ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಆದಷ್ಟು ಬೇಗ ಯೋಜನೆ ಪೂರ್ಣಗೊಳಿಸಲಾಗುವುದು. ಆ ಬಗ್ಗೆ ವಿಸ್ತೃತ ಪ್ರಮಾಣ ಪತ್ರ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಅಲ್ಲದೇ, ಕಾಮಗಾರಿ ವಿಳಂಬ ಮಾಡಿರುವುದಕ್ಕೆ ಮೇಲುಸೇತುವೆ ನಿರ್ಮಾಣ ಗುತ್ತಿಗೆ ಪಡೆದಿರುವ ಮೆಸರ್ಸ್ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಗೆ ದಂಡ ವಿಧಿಸಲಾಗಿದೆ. ಸದ್ಯ ಶೇ.44ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಹೊಸದಾಗಿ 2022ರ ಆಗಸ್ಟ್‌ 31ರ ಗಡುವು ವಿಧಿಸಲಾಗಿದ್ದು, ಅಷ್ಟರಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮೌಖಿಕ ಭರವಸೆ ನೀಡಿದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪೀಠ, 2021ರ ಜುಲೈ 29ರ ವಿಚಾರಣೆಯಂದೇ ನಿರ್ದಿಷ್ಟ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಲಾಗಿತ್ತು. ಆದರೆ, ಈವರೆಗೆ ಪ್ರಮಾಣ ಪತ್ರ ಸಲ್ಲಿಸಿಲ್ಲವೇಕೆ. ನೀವು ಗುತ್ತಿಗೆದಾರರಿಗೆ ದಂಡ ವಿಧಿಸಿದರೆ ಸಾಲದು, ಯೋಜನೆ ವಿಳಂಬದಿಂದ ಸಾರ್ವಜನಿಕರಿಗೆ ಎಷ್ಟು ತೊಂದರೆಯಾಗಿದೆ, ಎಷ್ಟು ಹಣ ಪೋಲಾಗಿದೆ ಎಂಬುದು ತಿಳಿದಿದೆಯೇ ಎಂದು ಪ್ರಶ್ನಿಸಿತು.ಅಲ್ಲದೇ, ಕಾಮಗಾರಿಗೆ ಅಷ್ಟೊಂದು ವಿಘ್ನಗಳಿದ್ದರೆ ಅದನ್ನೇಕೆ ಕೈಗೆತ್ತಿಕೊಳ್ಳಬೇಕಿತ್ತು. ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಸಂಬಂಧ ವಿಸ್ತೃತವಾದ ವರದಿ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಖ್ಯ ಆಯುಕ್ತ ಗೌರವ್‌ ಗುಪ್ತಾ ಮುಂದಿನ ವಿಚಾರಣೆ ವೇಳೆ ಯೋಜನೆಗೆ ಸಂಬಂಧಿಸಿದ ಎಲ್ಲ ದಾಖಲೆಗಳೊಂದಿಗೆ ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು.

For All Latest Updates

TAGGED:

ABOUT THE AUTHOR

...view details