ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣವನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ಈ ಕುರಿತಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠಕ್ಕೆ ತಿಳಿಸಿದರು.
ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಅವರ ಪರ ಕಿರಿಯ ವಕೀಲರು ಹಾಜರಾಗಿ ವಿಚಾರಣೆ ಮುಂದೂಡುವಂತೆ ಕೇಳಿಕೊಂಡರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್ ಪರ ವಕೀಲ ಸಿ.ಎಚ್.ಜಾಧವ್ ಅವರು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಕೋರಿದರು. ಆದರೆ, ನ್ಯಾಯಪೀಠ ಸಿಬಿಐ ಪರ ವಕೀಲರು ಸಿಬಿಐ ಪರವಾದ ಕಿರಿಯ ವಕೀಲರ ಮನವಿಯನ್ನು ಮಾನ್ಯ ಮಾಡಿ ವಿಚಾರಣೆಯನ್ನು ಮುಂದೂಡಿತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ಪರ ವಕೀಲರು, ಶಾಸಕ ಡಿ.ಕೆ.ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಕಾರಣಕ್ಕಾಗಿ ಕಿರುಕುಳ ನೀಡಲಾಗುತ್ತಿದ್ದು ಅವರ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅವರಿಗೆ ತೊಂದರೆ ನೀಡಬೇಕು ಎಂಬ ಕಾರಣಕ್ಕಾಗಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಜತೆಗೆ, ಹತ್ತಿರವಾಗುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅವರಿಗೆ ತೊಂದರೆ ನೀಡಬೇಕೆಂದು ಸತಾಯಿಸಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.