ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಅಸಿಂಧುಗೊಳಿಸಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿರುವ ಹೈಕೋರ್ಟ್, ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇ ಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲಾವಕಾಶ ಅಗತ್ಯವಿದ್ದು, ಅಲ್ಲಿಯವರೆಗೂ ಈ ಹಿಂದೆ ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಪ್ರತಿವಾದಿ ದೇವರಾಜೇಗೌಡ ಅವರ ಪರ ವಕೀಲರು, ಆದೇಶಕ್ಕೆ ತಡೆ ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನಿಮ್ಮ ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ದೂರಿದ್ದರು. ಆದರೆ, ಅರ್ಜಿ ದೋಷ ಪೂರಿತವಾಗಿದೆ ಎಂದು ಜನವರಿ 17ರಂದು ರಾಜ್ಯ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಅದರಲ್ಲಿನ ಲೋಪಗಳನ್ನು ಸರಿಪಡಿಸಲು ಕಾಲಾವಕಾಶ ನೀಡಿದ ನಂತರವೂ ಕಾಲಮಿತಿಯಲ್ಲಿ ಅವುಗಳನ್ನು ಸರಿಪಡಿಸಿಲ್ಲ ಎಂದು ಹೇಳಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ದೇವರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಬಳಿಕ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸುವಂತೆ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ವಕೀಲ ದೇವರಾಜೇಗೌಡರ ಮನವಿ ಏನು?: ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿ ಗಳಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸದೇ ತಾಂತ್ರಿಕ ಕಾರಣ ನೀಡಿ ಹೈಕೋರ್ಟ್ ಅರ್ಜಿ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಬೇಕು ಎಂದು ವಕೀಲ ಜಿ ದೇವರಾಜೇಗೌಡ ಅವರು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಅವರು ತಮ್ಮ 15ನೇ ವಯಸ್ಸಿಗೆ 23 ಕೋಟಿ ರೂ. ಆಸ್ತಿ ಮಾಡಿದ್ದಾರೆ. ಆದರೆ, ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿದ ಮಾಹಿತಿಯಲ್ಲಿ ಈ ಅಂಶಗಳಿಲ್ಲ. ಚುನಾವಣಾ ಆಯೋಗಕ್ಕೂ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಬೇನಾಮಿ ಆಸ್ತಿ ಮತ್ತು ಗೋಮಾಳ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ತನಿಖೆ ನಡೆಯಬೇಕು ಎಂದು ದೇವರಾಜೇಗೌಡ ಕೋರಿದ್ದರು.
ಇದನ್ನೂ ಓದಿ:ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ