ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಅವರ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಡಾ.ಕೆ.ಸುಧಾಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆಯಲ್ಲಿ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಅರ್ಜಿದಾರರ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಅವರು ಯಾವುದೇ ವ್ಯಕ್ತಿಯನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ.
ಆದರೂ ತಮ್ಮ ಕಕ್ಷಿದಾರರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಲಾಗಿದೆ. ಆದರೆ, ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಆಂಜನೇಯರೆಡ್ಡಿ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಆದರೂ ಅವರು ತಮ್ಮ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬುದಾಗಿ ಊಹೆ ಮಾಡಿಕೊಂಡಿದ್ದಾರೆ. ಅದರ ಮುಂದುವರಿದ ಭಾಗವಾಗಿ ನಮ್ಮ ಕಕ್ಷಿದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಪ್ರಕರಣ ರದ್ದು ಮಾಡಬೇಕು ಎಂದು ವಾದಿಸಿದರು.