ಬೆಂಗಳೂರು: ಕೇಂದ್ರ ಸರ್ಕಾರದ ಜೀತದಾಳು ಪುನರ್ವಸತಿ ಯೋಜನೆಯ ಎರಡು ಷರತ್ತುಗಳನ್ನು ರದ್ದುಪಡಿಸಬೇಕು, ಜೀತದಾಳುಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದು ಮತ್ತು ಜೀತಕ್ಕೆ ದುಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ವಜಾಗೊಳಿಸಬೇಕು ಹಾಗೂ ಜೀತ ಪದ್ದತಿ (ನಿರ್ಮೂಲನೆ) ಕಾಯ್ದೆ-1976ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ಜೀತ ವಿಮುಕ್ತಿ-ಕರ್ನಾಟಕ ಇದರ ಸಂಯೋಜಕ ಡಾ. ಕಿರಣ ಕಮಲ ಪ್ರಸಾದ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ಆದೇಶ: ಅಲ್ಲದೇ, ಅರ್ಜಿಯಲ್ಲಿ ಮನವಿ ಮಾಡಲಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸರ್ಕಾರ ಸೇರಿದಂತೆ ವಿವಿಧ ಸಕ್ಷಮ ಪ್ರಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಗಳನ್ನು ಅರ್ಜಿಯೊಂದಿಗೆ ಅಡಕ ಮಾಡಬೇಕು ಎಂದು ಸೂಚಿಸಿತು. ಅಲ್ಲದೇ ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಧಾನ ನಿರ್ದೇಶಕರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿತು.