ಕರ್ನಾಟಕ

karnataka

ದೇವರಾಯನದುರ್ಗದ ಮೀಸಲು ಅರಣ್ಯದಲ್ಲಿ ಒತ್ತುವರಿ ಪ್ರಕರಣ: ಸರ್ಕಾರಕ್ಕೆ ನೋಟಿಸ್​ ಜಾರಿ

By ETV Bharat Karnataka Team

Published : Jan 4, 2024, 8:10 PM IST

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನು ತೆರವು ವಿಚಾರವಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್​ ವಿಚಾರಣೆ ನಡೆಸಿತು.

ಅಕ್ರಮ ಒತ್ತುವರಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್
ಅಕ್ರಮ ಒತ್ತುವರಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್

ಬೆಂಗಳೂರು: ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವುಗೊಳಿಸಿ ಅರಣ್ಯ ಇಲಾಖೆಯ ಸುಪರ್ದಿಗೆ ವಹಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿತು.

ಅಲ್ಲದೆ, ಅರ್ಜಿಯಲ್ಲಿ ಆರೋಪಿಸಲಾಗಿರುವ ವಿಷಯಗಳ ಕುರಿತು ಉತ್ತರಿಸಿ ವರದಿ ಅಥವಾ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಬಿ.ವಿ.ಕೃಷ್ಣ ಅವರು ವಾದ ಮಂಡಿಸಿ, ಮೀಸಲು ಅರಣ್ಯ ಪ್ರದೇಶದ ಒತ್ತುವರಿ ಬಗ್ಗೆ ಸಂಬಂಧಪಟ್ಟ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಸಿವಿಲ್ ವ್ಯಾಜ್ಯವೊಂದರ ನೆಪ ಹೇಳಿ ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಅಸಲಿಗೆ ಅರಣ್ಯಾಧಿಕಾರಿಗಳು ಹೇಳುತ್ತಿರುವ ಸಿವಿಲ್ ವ್ಯಾಜ್ಯಕ್ಕೂ, ಒತ್ತುವರಿಗೂ ಸಂಬಂಧವಿಲ್ಲ. ಆದ್ದರಿಂದ ಒತ್ತುವರಿ ತೆರವಿಗೆ ಆದೇಶಿಸಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಅರ್ಜಿಯಲ್ಲಿರುವ ಅಂಶಗಳೇನು?ತುಮಕೂರು ತಾಲೂಕು ಊರ್ಡಿಗೇರಿ ಹೋಬಳಿಯ ವ್ಯಾಪ್ತಿಯ ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ 3 ಎಕರೆ 20 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿ ಜೆ. ಶ್ವೇತಕುಮಾರಿ ಒತ್ತುವರಿ ಮಾಡಿಕೊಂಡು, ಕಟ್ಟಡ ನಿರ್ಮಾಣ ಮಾಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಅಲ್ಲಿ ನಿರ್ಮಿಸಿರುವ ಕಟ್ಟಡವನ್ನು ನೆಲಸಮ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅಲ್ಲದೆ, ಶ್ವೇತಕುಮಾರಿ ಅವರು ಮುತ್ತಸಂದ್ರ ಗ್ರಾಮದ ಸರ್ವೆ ನಂಬರ್ 17 ಹಾಗೂ ವಡ್ಡರಹಳ್ಳಿ ಗ್ರಾಮದ ಸರ್ವೆ ನಂಬರ್ 26ರ ಗೋಮಾಳ ಜಾಗದಲ್ಲಿ ನಿರ್ಮಿಸಿರುವ ಕಾಂಕ್ರಿಟ್ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ:ಶ್ರೀಕಾಂತ್ ಪೂಜಾರಿ ಜಾಮೀನಿಗೆ ಪೊಲೀಸರ ಆಕ್ಷೇಪ : ನಾಳೆಗೆ ಆದೇಶ ಕಾಯ್ದಿರಿಸಿದ ಕೋರ್ಟ್

ABOUT THE AUTHOR

...view details