ಬೆಂಗಳೂರು: ಮಂಡ್ಯದಲ್ಲಿ ಹಬ್ಬಗಳ ಸಂದರ್ಭದಲ್ಲಿ ಎತ್ತಿನ ಬಂಡಿ ಓಟ ಸ್ಪರ್ಧೆ ನಡೆಸುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಎತ್ತಿನ ಬಂಡಿ ಓಟ ಸ್ಪರ್ಧೆ ಪ್ರಶ್ನಿಸಿ ಮೈಸೂರಿನ ಪೀಪಲ್ ಫಾರ್ ಅನಿಮಲ್ಸ್ ವೆಲ್ಫೇರ್ ಆರ್ಗನೈಜೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಪಶುಸಂಗೋಪನೆ ಇಲಾಖೆ ಆಯುಕ್ತರು, ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಕೆರಗೋಡು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ಗೆ ನೋಟಿಸ್ ಜಾರಿ ಮಾಡಿತು.
ಇದೇ ವೇಳೆ ಎತ್ತಿನ ಬಂಡಿ ಓಟದ ಸ್ಪರ್ಧೆಯು ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವು ತೀರ್ಪು ಉಲ್ಲಂಘನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿತು.