ಕರ್ನಾಟಕ

karnataka

ETV Bharat / state

ಪ್ರತಿಭಟನೆ-ರ‍್ಯಾಲಿಗಳಿಂದ ಟ್ರಾಫಿಕ್ ಜಾಮ್: ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್

ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಪತ್ರ ಆಧರಿಸಿ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

HC Notice to political Parties
ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್

By

Published : Mar 23, 2021, 8:50 PM IST

ಬೆಂಗಳೂರು: ನಗರದಲ್ಲಿ ರಾಜಕೀಯ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ, ರ‍್ಯಾಲಿಗಳಿಂದ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರ ಹಾಗೂ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಪತ್ರ ಆಧರಿಸಿ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಓದಿ : ನಿವೃತ್ತ ಸೇನಾಧಿಕಾರಿಗೆ ಭೂಮಿ ಮಂಜೂರು ಮಾಡದ ಅಧಿಕಾರಿ: ಹೈಕೋರ್ಟ್ ಗರಂ

ಬಳಿಕ, ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತ, ಬಿಬಿಎಂಪಿ ಆಯುಕ್ತ ಹಾಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್​ಗೆ ನೋಟಿಸ್ ಜಾರಿ ಮಾಡಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಏ. 16ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕಳೆದ ಮಾರ್ಚ್ 2ರಂದು ನಗರದ ವಿವಿಧೆಡೆ ನಡೆದ ಪ್ರತಿಭಟನೆಗಳಿಂದಾಗಿ ವಾಹನ ದಟ್ಟಣೆ ಹೆಚ್ಚಿ ಜನರು ಸಂಕಷ್ಟಕ್ಕೆ ಸಿಲುಕಿದ ವಿಚಾರವನ್ನು ಪ್ರಸ್ತಾಪಿಸಿದ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಜೊತೆಗೆ ಈ ಸಮಸ್ಯೆಯತ್ತ ಗಮನಹರಿಸುವ ಅಗತ್ಯವಿದೆ ಎಂದು ತಿಳಿಸಿದ್ದರು.

ಪತ್ರದಲ್ಲಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ರಸ್ತೆ ಸಾರಿಗೆ ಸಂಸ್ಥೆ ನೌಕರರು ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಗರದಲ್ಲಿ ನಡೆಸಿದ್ದ ಪ್ರತಿಭಟನೆ ಬಗ್ಗೆ ಮಾಧ್ಯಮಗಳು ಪ್ರಕಟಿಸಿದ್ದ ವರದಿಯನ್ನು ಉಲ್ಲೇಖಿಸಿದ್ದರು. ಈ ಪತ್ರ ಗಮನಿಸಿದ್ದ ಸಿಜೆ, ಪತ್ರ ಆಧರಿಸಿ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಳ್ಳುವಂತೆ ಮಾ. 5ರಂದು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿದ್ದರು.

ABOUT THE AUTHOR

...view details