ಬೆಂಗಳೂರು:ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಬಿಡಿಎಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬಿಡಿಎ ಅಧ್ಯಕ್ಷರಂತಹ ಲಾಭದಾಯಕ ಹುದ್ದೆಯಲ್ಲಿರುವ ಎಸ್ ಆರ್ ವಿಶ್ವನಾಥ್ ಅವರನ್ನು ಶಾಸಕ ಸ್ಥಾನ ಇಲ್ಲವೇ ಬಿಡಿಎ ಅಧ್ಯಕ್ಷ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಬೆಂಗಳೂರಿನ ವಕೀಲ ಹರೀಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಆ. 24 ರಂದು ತೀರ್ಪು ಕಾಯ್ದಿರಿಸಿದ್ದು, ಶನಿವಾರ ಪ್ರಕಟಸಿದೆ.
ಪ್ರಕರಣ ಸಂಬಂಧ ಅರ್ಜಿದಾರರು ನೀಡಿರುವ ಮನವಿ ರಾಜ್ಯಪಾಲರ ಪರಿಶೀಲನೆಯಲ್ಲಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿಗೆ ನಿರ್ದೇಶನ ನೀಡುವುಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.