ಬೆಂಗಳೂರು: ಒಂದೆಂಡೆ ಲೋಕಸಭೆ ಚುನಾವಣೆಗೆ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದ್ದರೆ, ಇನ್ನೊಂದೆಡೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ನಾಳೆ ದೆಹಲಿಗೆ ತೆರಳುತ್ತಿದ್ದಾರೆ.
ಕುಮಾರಸ್ವಾಮಿ ಅವರೊಂದಿಗೆ ಪುತ್ರ ಹಾಗೂ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೂಡ ತೆರಳುವ ಸಾಧ್ಯತೆ ಇದೆ.
ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಜೆಡಿಎಸ್ ಈಗ ಎನ್‌ಡಿಎ ಪಾಲುದಾರ ಪಕ್ಷವಾಗಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಿಂದ ಐದು ಕ್ಷೇತ್ರಗಳು ತಮ್ಮ ಪಕ್ಷಕ್ಕೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದೆ. ಆದರೆ, ಸೀಟು ಹಂಚಿಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಹಾಗಾಗಿ, ಈ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಲಿರುವ ಹೆಚ್ ಡಿಕೆ, ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಆದರೆ, ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕನಿಷ್ಠ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಎಸ್‌ಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಅದಕ್ಕಿಂತ ಹೆಚ್ಚು ಸ್ಥಾನ ಕೇಳಿ ಒತ್ತಡ ಹೇರುವ ಪ್ರಯತ್ನವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ ಎನ್ನಲಾಗಿದೆ.