ಬೆಂಗಳೂರು:ಜೂನ್ ತಿಂಗಳಲ್ಲಿ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳಿಗೆ ನಡೆಯುವ ಚುನಾವಣೆ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಸವರಾಜ ಹೊರಟ್ಟಿ ಜೊತೆ ಇಂದು ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಭಾಪತಿ ನಿವಾಸಕ್ಕೆ ತೆರಳಿದ ಕುಮಾರಸ್ವಾಮಿ, ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗುವ ವದಂತಿ ಕುರಿತು ಕೂಡಾ ಮಾತುಕತೆ ನಡೆಸಿದರು ಎಂದು ಹೇಳಲಾಗುತ್ತಿದೆ. ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಬಿಜೆಪಿಗೆ ಬಹುಮತವಿದ್ದು, ಜೂನ್ ತಿಂಗಳಲ್ಲಿ ಪರಿಷತ್‌ಗೆ ನಡೆಯುವ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಕೆಲ ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರೂ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಕೈತಪ್ಪಲಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಹೀಗಾಗಿ, ಕೆಲವರು ಹೊರಟ್ಟಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಅವರು ಬಿಜೆಪಿಯಿಂದ ಸ್ಪರ್ಧಿಸಿದರೆ ಪಕ್ಷಕ್ಕೆ ಒಂದು ಸ್ಥಾನ ಬರುವುದು ಖಚಿತ ಎಂಬ ಚಿಂತನೆ ಪಕ್ಷದಲ್ಲಿದೆ. ಒಂದು ವೇಳೆ ಹೊರಟ್ಟಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರೆ ಸಭಾಪತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆ.