ಬೆಂಗಳೂರು:ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಆತಂಕಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳುಹಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು. ಈ ಬೆದರಿಕೆಗಳ ಬಗ್ಗೆ ಆಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಮೀನಮೇಷ ಎಣಿಸಬಾರದು ಎಂದರು ಹೇಳಿದ್ದಾರೆ.
ತನಿಖೆಗೆ ವಿಜಯೇಂದ್ರ ಆಗ್ರಹ:ಶಾಲೆಗಳಿಗೆ ಬಂದಿರುವ ಹುಸಿ ಬಾಂಬ್ ಬೆದರಿಕೆ ಕರೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಸಮಾಜ ಕಂಟಕ ಶಕ್ತಿಗಳಿಗೆ ಪೊಲೀಸ್ ಭಯ ಇಲ್ಲದಂತಾಗಿದೆ. ಇದರ ಪರಿಣಾಮವಾಗಿಯೇ ಕಿಡಿಗೇಡಿಗಳು ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂದು ಭಯದ ವಾತಾವರಣ ಸೃಷ್ಟಿಸಲು ನಿರ್ಭಯವಾಗಿ ಪ್ರಯತ್ನ ನಡೆಸಿದ್ದಾರೆ. ಆದರೆ ಈ ಪ್ರಕರಣವನ್ನು ಹುಸಿ ಎಂದು ಹಗುರವಾಗಿಯೂ ಪರಿಗಣಿಸುವಂತಿಲ್ಲ, ಸಮಾಜ ಪೀಡಕ ಶಕ್ತಿಗಳು ಶಾಲೆಗಳನ್ನೇ ಗುರಿಯಾಗಿಸಿಕೊಂಡು ಬೆದರಿಕೆ ಒಡ್ಡಿದ್ದಾರೆಂದರೆ, ಈ ಬಗ್ಗೆ ಗಂಭೀರ ತನಿಖೆ ಹಾಗೂ ಮುಂಜಾಗ್ರತೆ ವಹಿಸಬೇಕಾಗಿರುವುದು ಸರ್ಕಾರದ ಆದ್ಯತೆಯಾಗಬೇಕಿದೆ ಎಂದಿದ್ದಾರೆ.
ರಾಜ್ಯದ ಪ್ರತಿಯೊಂದು ಶಾಲೆಗಳಿಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಆತಂಕ ರಹಿತ ವಾತಾವರಣ ಮೂಡಿಸಲು ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು ಈ ಪ್ರಕರಣದ ಸಮಗ್ರ ತನಿಖೆಗೆ ವಹಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.