ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮೇರೆ ಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ನಲ್ಲಿ ಕಿಡಿಕಾರಿರುವ ಅವರು, ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂಥ ಪ್ರಕರಣಗಳು ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಮುಖಂಡರು, ನಗರಸಭೆ ಸದಸ್ಯರಾದ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕೆಲ ದಿನಗಳ ಹಿಂದೆ ಹಾಸನದಲ್ಲಿ ಜೆಡಿಎಸ್ ಮುಖಂಡರಾದ ಕೃಷ್ಣೇಗೌಡರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡರಾದ ಅಶ್ವತ್ಥ್ ಅವರ ಮೇಲೆ ದಾಳಿ ನಡೆದಿತ್ತು. ಈಗ ಚಿಂತಾಮಣಿಯಲ್ಲಿ ಅಂಥಹದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ
ಅದರಲ್ಲೂ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರ್ಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಹೆಚ್ಡಿಕೆ ಎಚ್ಚರಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ್ ಮಾಹಿತಿ
ಚಿಕ್ಕಬಳ್ಳಾಪುರ ನಗರದ ಗಜಾನನ ಸರ್ಕಲ್ ಬಳಿ ಜೆಡಿಎಸ್ ನಗರಸಭೆ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಅಗ್ರಹಾರ ಮುರಳಿ ಅವರು ಇದ್ದಾಗ ಅಪರಿಚಿತರ ಗುಂಪೊಂದು ಮಾರಕಾಸ್ತ್ರಗಳಿಂದ ಬಂತು ಹಲ್ಲೆ ನಡೆಸಿದೆ ಎಂಬ ಮಾಹಿತಿ ಇದೆ. ಅದರಂತೆ ನಾವು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಸದ್ಯದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ್ ಮಾಹಿತಿ ನೀಡಿದ್ದಾರೆ.
ಸದ್ಯ ಅಗ್ರಹಾರ ಮುರಳಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು, ಮಾಹಿತಿ ಕಲೆ ಹಾಕಲಾಗಿದೆ. ಇದುವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ದೂರು ನೀಡಿಲ್ಲ. ಆದರೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕ ಸಮೃದ್ಧ ಎಟಿಎಂ: ಹೆಚ್.ಡಿ.ಕುಮಾರಸ್ವಾಮಿ ಲೇವಡಿ