ಬೆಂಗಳೂರು: ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿ ಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪರೋಕ್ಷವಾಗಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ಮಾಧ್ಯಮಗೋಷ್ಟಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು ಎಂದಿದ್ದಾರೆ.