ಬೆಂಗಳೂರು: ರಾಜ್ಯದ 2023 ರ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ 135 ಸ್ಥಾನಗಳನ್ನು ಗೆದ್ದು ಗದ್ದುಗೆ ಏರಿರುವ ಕಾಂಗ್ರೆಸ್ ಪಕ್ಷದಿಂದ ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎಂಟು ಸಚಿವರ ಜೊತೆಗೆ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಅವರು ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಕೋರಿದ್ದಾರೆ. ಅಭೂತ ಪೂರ್ವ ಜಯದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಸೇವೆ ಮಾಡಲಿ. ಕನ್ನಡ ನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಿದ್ದು, ಡಿಕೆಶಿ ಪ್ರಮಾಣ ವಚನ: ಬಿಜೆಪಿಯೇತರ ಸರ್ಕಾರದ ಬಗ್ಗೆ ಸುಳಿವು ನೀಡಿದ ರಾಷ್ಟ್ರೀಯ ನಾಯಕರು...
ಟ್ವೀಟ್ ಮಾಡಿದ ಬಿಜೆಪಿ:ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟಕ್ಕೆ ಅಭಿನಂದನೆ ಸಲ್ಲಿಸಿರುವ ಬಿಜೆಪಿ, ರಾಜ್ಯದಲ್ಲಿ ಶಾಂತಿ ನೆಲಸಲಿದೆ. ಪಂಚ ಗ್ಯಾರಂಟಿಗಳ ಅನುಷ್ಠಾನ ಆಗಲಿದೆ ಎಂದು ಭಾವಿಸಿದ್ದೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.