ಬೆಂಗಳೂರು :ಸೀಲ್ಡೌನ್ಗೆ ಸಂಬಂಧಿಸಿದಂತೆ ಬಗೆಬಗೆಯ ಸುದ್ದಿ ಹರಿದಾಡುತ್ತಿವೆ. ಇದರಿಂದಾಗಿ ಜನರಲ್ಲಿ ಭೀತಿ ಆವರಿಸಿ ಸಮೂಹ ಸನ್ನಿಗೆ ಸಿಲುಕಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿವೆ. ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ ಸರ್ಕಾರ ಅನುಮಾನಗಳನ್ನು ನೀಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸೀಲ್ಡೌನ್ ಭೀತಿ ಜನರನ್ನು ಸಮೂಹ ಸನ್ನಿಗೆ ದೂಡಿರುವಾಗಲೇ, ದಿನಸಿ ಅಂಗಡಿ, ಔಷಧಾಲಯಗಳು ತೆರೆಯಬೇಕೋ, ಬೇಡವೋ ಎಂಬ ಅನುಮಾನ ಮಾರಾಟಗಾರರಲ್ಲಿ ಮೂಡಿದೆ. ಹಾಗೇನಾದರೂ ದಿನಸಿ ಅಂಗಡಿಗಳು, ಔಷಧಾಲಯಗಳು ಭೀತಿಯಿಂದ ಮುಚ್ಚಿದರೆ, ಜನರಿಗೆ ಆಹಾರ, ಔಷಧಗಳ ಲಭ್ಯತೆಯಲ್ಲಿ ಸಮಸ್ಯೆ ಸೃಷ್ಟಿಯಾಗಲಿದೆ. ಈ ಬಗ್ಗೆ ಸರ್ಕಾರ ಎಚ್ಚರ ವಹಿಸುವ ತುರ್ತು ಎದುರಾಗಿದೆ ಎಂದು ಹೇಳಿದ್ದಾರೆ.
ಸೀಲ್ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆಯೇ? ಮಾಡುವುದಿದ್ದರೆ ಯಾವ್ಯಾವ ಜಿಲ್ಲೆಗಳಿಗೆ ಇದು ಅನ್ವಯ? ಸೀಲ್ಡೌನ್ ಅವಧಿಯಲ್ಲಿ ಏನೆಲ್ಲಾ ಲಭ್ಯ, ಏನು ಲಭ್ಯವಿರದು ಎಂಬುದರ ಬಗ್ಗೆ ಸರ್ಕಾರ ಕೂಡಲೇ ಅಧಿಕೃತವಾಗಿ ಮಾಹಿತಿ ನೀಡಬೇಕು ಎಂದು ಆಗ್ರಹಿಸಿರುವ ಹೆಚ್ಡಿಕೆ, ಇಲ್ಲವಾದಲ್ಲಿ ಗಾಳಿ ಸುದ್ದಿ, ಸುಳ್ಳು ಮಾಹಿತಿಗಳು ಜನರ ದಿಕ್ಕು ತಪ್ಪಿಸಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.