ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು 50 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟು, ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾರಾಜಿನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಂಜನೇಯ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದವರು. ಪ್ರಕರಣದಲ್ಲಿ ಸಬ್ ಇನ್ಸ್ಪೆಕ್ಟರ್ ಮಾರುತಿ ಮತ್ತು ಇನ್ಸ್ಪೆಕ್ಟರ್ ಲಕ್ಷ್ಮಣ್ ಗೌಡ ಕೂಡ ಆರೋಪಿಗಳಾಗಿದ್ದು, ಲೋಕಾಯುಕ್ತ ಪೊಲೀಸರ ದಾಳಿ ವೇಳೆ ತಲೆಮರೆಸಿಕೊಂಡಿದ್ದಾರೆ.
ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಪಿಎಸ್ಐ ಮಾರುತಿ, ಇನ್ಸ್ಪೆಕ್ಟರ್ ಲಕ್ಷ್ಮಣ್ ಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಐದು ಸಾವಿರ ರೂಪಾಯಿ ಲಂಚದ ಹಣ ಪಡೆಯುವಾಗ ಪ್ರಕರಣದ ಪ್ರಮುಖ ಆರೋಪಿ ಹೆಡ್ ಕಾನ್ಸ್ಟೇಬಲ್ ಆಂಜನೇಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರತ್ಯೇಕ ಘಟನೆ- ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಲೋಕಾಯುಕ್ತ ಬಲೆಗೆ: ಕಳೆದ ತಿಂಗಳು ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳು ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾ. ಪಂ. ಪಿಡಿಒ ರಾಘವೇಂದ್ರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದವರು.