ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಪರೀಕ್ಷೆ ನಡೆಸಿ ಸೋಂಕು ಹೆಚ್ಚಾದರೆ ಆಗ ಯಾವ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನ ಮಾಡಲಾಗುವುದು. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನೆಯೇ ಸಭೆ ನಡೆಸಿ ಕೆಲವು ಸಲಹೆಗಳನ್ನು ನೀಡಿದ್ದಾರೆ.
ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಗ್ನಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.