ಬೆಂಗಳೂರು:ವ್ಯಾಪಾರ ಪರವಾನಗಿ ನವೀಕರಣಗೊಳಿಸಲು ಸ್ಪಾ ಮಾಲೀಕನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಿಬಿಎಂಪಿ ಹೆಲ್ತ್ ಇನ್ಸ್‌ಪೆಕ್ಟರ್ ಅನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸ್ಪಾ ಮಾಲೀಕನಿಂದ 18 ಸಾವಿರ ರೂ. ಸ್ವೀಕರಿಸುತ್ತಿದ್ದಾಗಲೇ ಸಿ.ವಿ. ರಾಮನ್ ನಗರ ವಾರ್ಡ್ನ ಹೆಲ್ತ್ ಇನ್ಸ್‌ಪೆಕ್ಟರ್ ರಾಮಯ್ಯರ ಅವರನ್ನ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.
ಇಂದಿರಾನಗರದಲ್ಲಿ ವೆಲ್ನೆಸ್ ಹೆಸರಿನ ಸ್ಪಾ ಹೊಂದಿದ್ದ ಸುಬ್ರಹ್ಮಣ್ಯ ಎಂಬುವವರು ಟ್ರೇಡ್ ಲೈಸೆನ್ಸ್ ನವೀಕರಣಕ್ಕಾಗಿ ಮನವಿ ಸಲ್ಲಿಸಿದ್ದರು. ಆದರೆ, ಹೆಲ್ತ್ ಇನ್ಸ್‌ಪೆಕ್ಟರ್ ರಾಮಯ್ಯ ಇದಕ್ಕೆ ಪ್ರತಿಯಾಗಿ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇದರಿಂದಾಗಿ ಸುಬ್ರಹ್ಮಣ್ಯ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು 18 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದಾಗಲೇ ರಾಮಯ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತದಿಂದ ಸರಣಿ ದಾಳಿಗಳು:ಇತ್ತೀಚೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ಹಾಗೂ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ತಮ್ಮ ಕಚೇರಿಯಲ್ಲಿ ಟೆಂಡರ್ಗೆ ಸಂಬಂಧಿಸಿದಂತೆ ಟೆಂಡರ್ ಆಕಾಂಕ್ಷಿಯೊಬ್ಬರಿಂದ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೆ ವಿರೂಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್ ಮಾಡಾಳ್ ಮನೆಗಳ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು ಕೋಟಿಗಟ್ಟಲೆ ಹಣ ಹಾಗೂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದರು.