ಬೆಂಗಳೂರು:ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಮೆಮೋ ಪರಿಗಣಿಸಿದ ನ್ಯಾ. ಬಿ.ಎಂ. ಶ್ಯಾಮ್‌ಪ್ರಸಾದ್ ಹಾಗೂ ನ್ಯಾ. ಎಂ.ಜಿ.ಎಸ್ ಕಮಲ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ಮೇ.17ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.
ಅರ್ಜಿ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಿದೆ. ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ.
ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದೆ. ಆದ್ದರಿಂದ ಮೇ 17ರಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿಬೇಕು ಎಂದು ಕೋರಿದರು. ಚುನಾವಣಾ ಆಯೋಗದ ಪರ ವಕೀಲರ ಪರಿಗಣಿಸಿದ ಪೀಠ, ಅರ್ಜಿ ವಿಚಾರಣೆಯನ್ನು ಮೇ 17ರಂದು ನಡೆಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿತು.
ರಾಜ್ಯದ ಹಲವು ತಾ.ಪಂ ಮತ್ತು ಜಿ.ಪಂಗಳ ಅವಧಿ 2021ರ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲೇ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅವಧಿ ಮುಗಿದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿತ್ತು. ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡು ಸಹ ಪ್ರಕಟಿಸಿತ್ತು.
ಇನ್ನೇನು ದಿನಾಂಕ ಘೋಷಣೆ ಮಾಡಬೇಕು ಎನ್ನುವಷ್ಟರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣೆ ಹಂತದಲ್ಲಿದ್ದು, ತುರ್ತಾಗಿ ಪರಿಗಣಿಸುವಂತೆ ಆಯೋಗ ಹೈಕೋರ್ಟ್ಗೆ ಮನವಿ ಮಾಡಿದೆ.
ಇದನ್ನೂ ಓದಿ:ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ವಂತ್ ಸಿಂಗ್ ನೇಮಕ ಸಾಧ್ಯತೆ