ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಮುಂದಿನ ವಾರವೂ ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಇಂದು ಮಾಹಿತಿ ನೀಡಿರುವ ಅವರು, ಪೂರ್ವ ಬಂಗಾಳ ಉಪ ಸಾಗರದಲ್ಲಿ ಅಕ್ಟೋಬರ್ 19ರಂದು ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಇದರ ಪರಿಣಾಮ, ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅ. 19ರಂದು ಅಲ್ಲಲ್ಲಿ ಮಳೆಯಾಗಲಿದ್ದು, ಅ.21-22 ರಂದು ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 19-22ರ ವರೆಗೆ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಅ.20ರಂದು ಯೆಲ್ಲೋ ಅಲರ್ಟ್ ಮತ್ತು ಅ. 21-22ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದರು.