ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ.15ರವರೆಗೂ ಭಾರಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಪ್ರಮಾಣ ತಗ್ಗಿದೆಯಾದರೂ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿಲ್ಲ. ಬದಲಾಗಿ ಮುಂದಿನ ನಾಲ್ಕೈದು ದಿನ ಇನ್ನಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ ಸೇರಿದಂತೆ 20 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಈ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ದಿಲ್ಲಿ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಹವಾಮಾನ ವೈಪರೀತ್ಯ ಇದಕ್ಕೆ ಕಾರಣ ಎನ್ನಲಾಗಿದೆ. ಈ ಪರಿಸ್ಥಿತಿ ಇನ್ನೂ ಕೆಲ ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ :ಹಿಮಪಾತದಲ್ಲಿ ಮೃತಪಟ್ಟ ಇಬ್ಬರ ಮೃತದೇಹ ತರಿಸಲು ಸರ್ಕಾರದಿಂದ ವ್ಯವಸ್ಥೆ: ಸಚಿವ ಅಶೋಕ್