ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ, ಕರ್ನಾಟಕದ ಕರಾವಳಿ ಭಾಗದಲ್ಲಿ ಮೋಡ ದಟ್ಟವಾಗಿರುವುದರಿಂದ ರಾಜ್ಯದಲ್ಲಿ ಜು.13 ರಿಂದ 17 ನೇ ತಾರೀಕಿನವರೆಗೆ ಐದು ದಿನಗಳವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 13, 14, 17 ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಮೂರೂ ಜಿಲ್ಲೆಗಳಲ್ಲಿ 15-16 ರಂದು ಮಳೆಯ ರಭಸ ಮತ್ತಷ್ಟು ಜೋರಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಕೂಡ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್. ಪಾಟೀಲ ತಿಳಿಸಿದ್ದಾರೆ.
ಮಳೆಯ ವಿವರ ತಿಳಿಸಿದಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಉತ್ತರ ಒಳನಾಡಿನಲ್ಲಿ ಜುಲೈ 13, 16 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಜುಲೈ 14 ಹಾಗೂ 15 ರಂದು ವ್ಯಾಪಕ ಮಳೆಯಾಗಲಿದೆ. ಜುಲೈ 17 ರಂದು ಕರ್ನಾಟಕದ ಒಳನಾಡಿನಲ್ಲಿ ಮಳೆ ತಗ್ಗಲಿದೆ. ಬೆಳಗಾವಿ, ಯಾದಗಿರಿ, ಗುಲ್ಬರ್ಗ, ಬೀದರ್ ಜಿಲ್ಲೆಗಳಲ್ಲಿ 13,14,15 ರಂದು ಭಾರೀ ಮಳೆ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಎರಡು ದಿನ ಹಗುರ ಮಳೆ
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ 13 ರಿಂದ 17ರ ವರೆಗೆ ಮಳೆ ನಿರೀಕ್ಷೆ ಇದ್ದು, 16 ರಿಂದ ಮಳೆ ಪ್ರಮಾಣ ತಗ್ಗಲಿದೆ. ಜುಲೈ 13 ಹಾಗೂ 15 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.