ಬೆಂಗಳೂರು:ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22ರ ವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದರು.
ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಇಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 21 ಸೆಂ.ಮೀ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 18, ಆಗುಂಬೆ 15, ಶಿವಮೊಗ್ಗದ ತಾಳಗುಪ್ಪದಲ್ಲಿ 13, ಹೊನ್ನಾವರ ಮತ್ತು ಸಿದ್ದಾಪುರದಲ್ಲಿ ತಲಾ 12 ಸೆಂ.ಮೀ. ಮಳೆಯಾಗಿದೆ ಎಂದು ಹೇಳಿದರು.
ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಹೈ ಅಲರ್ಟ್:
ದಕ್ಷಿಣ ಒಳನಾಡಿನಲ್ಲಿ ಜೂನ್ 22ರವರೆಗೆ ಬುಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವೆಡೆ ಜೂನ್ 22ರವರೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದರು.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಜೂನ್ 19ರಂದು ಆರೆಂಜ್ ಅಲರ್ಟ್ ಹಾಗೂ ಜೂನ್ 20ರಂದು ಎಲ್ಲೋ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದರು.
ಕರಾವಳಿ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಜೂ. 19ರ ವರೆಗೆ ಮೀನುಗಾರರು, ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಸಿ. ಎಸ್. ಪಾಟೀಲ್ ಮಾಹಿತಿ ನೀಡಿದರು.