ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಹೆಬ್ಬಾಳ ಮೇಲ್ಸೇತುವೆಯ ವಿಸ್ತರಿತ ಯೋಜನೆ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ಬಿಡಿಎ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಹೆಚ್ಚಾಗಿರುವುದರಿಂದ ಹೆಬ್ಬಾಳ ಮೇಲ್ಸೇತುವೆ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಡೆಯಿಂದ ನಗರದ ಕಡೆಗೆ ಇರುವ ಮೇಲ್ಸೇತುವೆ ಜೊತೆಗೆ ಇನ್ನೆರಡು ಪಥಗಳನ್ನು ನಿರ್ಮಿಸಲಾಗುತ್ತದೆ ಎಂದರು.
ಈ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದು, ಕೂಡಲೇ ಕಾಮಗಾರಿಯನ್ನು ಆರಂಭಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಸದ್ಯದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.
ಹಣಕಾಸಿನ ತೊಂದರೆ ಇಲ್ಲ:ಕಳೆದ ಎರಡು ವರ್ಷಗಳ ಹಿಂದೆ ಬಿಡಿಎ ಆರ್ಥಿಕ ಸಂಕಷ್ಟ ಎದುರಿಸುತ್ತಿತ್ತು. ಭೂ ಕಬಳಿಕೆದಾರರಿಂದ ಬಿಡಿಎ ಆಸ್ತಿಯನ್ನು ವಶಪಡಿಸಿಕೊಳ್ಳುವ ಕಾರ್ಯಾಚರಣೆ ನಡೆಸಿ, ನಿವೇಶನಗಳನ್ನು ಸಾರ್ವಜನಿಕರಿಗೆ ಹರಾಜು ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಸಂಸ್ಥೆಗೆ ಹಣಕಾಸು ಕ್ರೋಢೀಕರಣವಾಗುತ್ತಿದ್ದು, ಪ್ರಸ್ತುತ ಒಂದು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹವಾಗಿದೆ ಎಂದು ಹೇಳಿದರು.